ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ

gan (6)
Published on

ಕುಂದಾಪುರ: ಸಂಗೀತವು ಭಾರತೀಯ ಸಂಸ್ಕೃತಿ ಬೆಳೆಸುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುತ್ತದೆ.

ಸಂಗೀತ ಕಲೆಯು ಸಮಸ್ತ ಜೀವ ರಾಶಿಯನ್ನು ತನ್ನತ್ತ ಸೆಳೆಯುವುದರ ಜತೆಗೆ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರದ ಭಂಡಾರ್‌ಕರ್ಸ್‌ ಕಾಲೇಜು ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಂಡಾರ್‌ಕರ್ಸ್‌ ಕಾಲೇಜು ಐಕ್ಯೂಎಸಿ ವಿಭಾಗದ ಸಹಯೋಗದಿಂದ ಗುರುವಾರ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಹಾಡಿರೇ ರಾಗಗಳ ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶಿಯ ಕಲೆ ಉಳಿವಿಗೆ, ನಮ್ಮ ಸಂಸ್ಕೃತಿ ಬಿಂಬಿಸುವ ಅನೇಕ ಸಂಗೀತ ಪ್ರಕಾರಗಳಿದ್ದು, ಇಂತಹ ಕಾರ್ಯಕ್ರಮಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೇದಿಕೆ ಕಲ್ಪಿಸುತ್ತದೆ. ವಿದ್ಯಾರ್ಥಿಗಳು ಸಂಗೀತ, ನೃತ್ಯ, ಯಕ್ಷಗಾನದಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ತಮ್ಮ ಶೈಕ್ಷಣಿಕ ವಿಷಯದಲ್ಲೂ ಹೆಚ್ಚಿನ ಸಾಧನೆ ಮಾಡಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಂಡಾರ್‌ಕರ್ಸ್‌ ಕಾಲೇಜು ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಶಾಂತರಾಮ ಪ್ರಭು ಶುಭ ಹಾರೈಸಿದರು. ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು.

ಕಾಲೇಜು ಐಕ್ಯೂಎಸಿ ಸಂಯೋಜಕ ಸತ್ಯನಾರಾಯಣ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net