

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯ ಬೀಗ ಮುರಿದಿರುವ ಕಳ್ಳರು ಚಿನ್ನ, ಬೆಳ್ಳಿ, ವಜ್ರದ ಆಭರಣಗಳು, ನಗದು ಸೇರಿ ಕೋಟ್ಯಂತ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ.
ಯಲಹಂಕಯದ ನ್ಯಾಯಾಂಗ ಬಡಾವಣೆ ನಿವಾಸಿ ರಾಮಮೂರ್ತಿ ಎಂಬುವವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಇವರು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಂಬಂಧಿ ಎಂದು ತಿಳಿದು ಬಂದಿದೆ. ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಮಮೂರ್ತಿ ಅವರು ಮೂರು ದಿನಗಳ ಹಿಂದೆ ಕುಟುಂಬದ ಸಮೇತ ಬೇರೆ ಊರಿಗೆ ಹೋಗಿದ್ದರು. ಈ ವೇಳೆ ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು. ವಾಪಾಸ್ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿರುವುದು ಕಂಡು ಬಂದಿದೆ. ಮನೆ ಪ್ರವೇಶಿಸಿ ಪರಿಶೀಲಿಸಿದಾಗ ದುಷ್ಕರ್ಮಿಗಳು ರೂಮ್‌ನಲ್ಲಿದ್ದ ಲಾಕರ್ ಒಡೆದು ನಗದು, ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ರಾಮಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.