

ಮಂಡ್ಯ: ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ಬೆಳ್ಳೂರು ಕಡೆಗೆ ಸಾಗುತ್ತಿದ್ದ ಬಸ್ ಹಾಗೂ ಮೈಸೂರು ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಜೊತೆಗಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳು. ಕಾರಿನಲ್ಲಿದ್ದವರು ಆದಿಚುಂಚನಗಿರಿ ಕ್ಷೇತ್ರದಲ್ಲಿ ದರ್ಶನ ಮುಗಿಸಿ ಹೊರಟಿದ್ದರು. ಗಂಭೀರವಾಗಿ ಗಾಯಗೊಂಡು ಮೂರ್ಛೆ ತಪ್ಪಿದ ಸ್ಥಿತಿಯಲ್ಲಿರುವ 15 ವರ್ಷದ ಯುವತಿಯನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶವಗಳನ್ನು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಗಮಂಗಲ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.