ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ

13-klr-1
Published on

ಕೋಲಾರ: 1961ರ ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ರಾಜ್ಯ ಸರ್ಕಾರವು ತಿದ್ದುಪಡಿ ಮಾಡಿರುವುದನ್ನು ಕೂಡಲೆ ವಾಪಸ್ ಪಡೆಯುವಂತೆ ಆಗ್ರಹಿಸಿ ರೈತಸಂಘ ಉಪವಿಭಾಗಾಧಿಕಾರಿಗಳ ಮುಖಾಂತರ ಕಂದಾಯ ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಿತು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದಂತಾಗುತ್ತದೆ. ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ರೈತರನ್ನು ಬೀದಿಗೆ ತಳ್ಳಿ, ಉದ್ಯಮಿಗಳು, ರಿಯಲ್ ಎಸ್ಟೇಟ್‌ನವರು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವವರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಜನಾಭಿಪ್ರಾಯವನ್ನು ಪಡೆಯದೆ ಏಕಾಏಕಿ ಕಾಯ್ದೆಗೂ ತಿದ್ದಿಪಡಿ ತಂದಿರುವುದು ರೈತ ವಿರೋಧಿ ಧೋರಣೆಯಾಗಿದೆ. ಕೂಡಲೆ ಆದೇಶ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಈ ಮೊದಲು 25 ಲಕ್ಷ ರೂ. ವರೆಗೆ ಕೃಷಿಯೇತರ ಆದಾಯ ಹೊಂದಿರುವವರು ಮಾತ್ರ ಕೃಷಿ ಭೂಮಿ ಖರೀದಿಸಬಹುದಾಗಿತ್ತು. ಈ ನಿರ್ಬಂಧ ತೆರವಾಗುವುದರಿಂದ ಹಣವುಳ್ಳವರಿಗೆ ಜಮೀನು ಖರೀದಿಸಲು ಸುಲಭವಾಗಲಿದೆ. ಕೃಷಿಕರಲ್ಲಿ ಶೇ.80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಬೆಳೆ ಹಾನಿ ಮತ್ತಿತರ ಕಾರಣದಿಂದ ಸಂಕಷ್ಟದಲ್ಲಿದ್ದಾರೆ. ಒಮ್ಮೆಲೇ ಕೈತುಂಬ ಹಣ ಸಿಗುವ ಆಸೆಯಿಂದ ಭೂಮಿ ಮಾರಾಟ ಮಾಡಲು ಮುಂದಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಕಾಯ್ದೆ ತಿದ್ದುಪಡಿ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಉಪವಿಭಾಗಾಧಿಕಾರಿ ಸೋಮಶೇಖರ್ ಮನವಿ ಸ್ವೀಕರಿಸಿದರು. ರೈತಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಭಾರ್ಗವ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net