

ಶಿವಮೊಗ್ಗ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸೆ.12ರ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಾಲೆಕೊಪ್ಪ ರಾಮಚಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಉಪಸ್ಥಿತಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಬಿಜೆಪಿಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ಸೋಮವಾರ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರೈತರು ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸಚಿವರಿಗಾಗಿ ಹೊಸ ಕಾರು ಖರೀದಿ ಮಾಡಲಾಗಿದೆ. ಬರ ಘೋಷಣೆ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರೈತರ ಆತ್ಮಹತ್ಯೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಇಬ್ಬರು ಸಚಿವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.2ರವರೆಗೆ ಜಿಲ್ಲೆಯ ವಿವಿಧೆಡೆ ಸೇವಾ ಪಾಕ್ಷಿಕದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟಿ.ಡಿ.ಮೇಘರಾಜ್ ತಿಳಿಸಿದರು. ಸೆ.17ರಂದು ಎಲ್ಲ ಶಕ್ತಿ ಕೇಂದ್ರಗಳಲ್ಲೂ ರಕ್ತದಾನ ಶಿಬಿರ ನಡೆಸಲಾಗುವುದು. ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡಿಸಲಾಗವುದು. ಸೆ.23ರಂದು ಪಂಡಿತ್ ಜಿಲ್ಲೆಯ 1,775 ಮತಗಟ್ಟೆಗಳಲ್ಲೂ ಧೀನದಯಾಳ ಉಪಾಧ್ಯಾಯ ಜಯಂತಿ ಹಮ್ಮಿಕೊಳ್ಳಲಾಗುವುದು. ಸೆ.26ರಿಂದ ಅ.2ರವರೆಗೆ ಎಲ್ಲ ಮಹಾಶಕ್ತಿ ಕೇಂದ್ರಗಳಲ್ಲಿ ಬೂತ್ ಸಶಕ್ತೀಕರಣದ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.