ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯನ್ನು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಯಾವುದೇ ನಾಮಪತ್ರ ಸಲ್ಲಿಸದೆ ಚುನಾವಣೆ ಬಹಿಷ್ಕಾರ ನಡೆಸಲು ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.
ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯ ಐನೆಕಿದು ವಾರ್ಡ್‌ನಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ನ.12ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿತ್ತು. ಸಂಜೆವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ.
ಕಸ್ತೂರಿ ರಂಗನ್ ವರದಿ ಕೈ ಬಿಡಬೇಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಕೆಲಸಗಳನ್ನು ಗ್ರಾಮ ಪಂಚಾಯಿತಿಯಲ್ಲೇ ಮಾಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆ ಎನ್ನಲಾಗಿದೆ. ಈ ಬಗ್ಗೆ ಪ್ರಮುಖರು ಕೆಲ ದಿನಗಳ ಹಿಂದೆಯೇ ಐನೆಕಿದುವಿನಲ್ಲಿ ಸಭೆ ನಡೆಸಿ ಚುನಾವಣೆಗೆ ನಾಮಪತ್ರ ಹಾಕದೆ ಚುನಾವಣೆ ಬಹಿಷ್ಕರಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಮತ ಚಲಾಯಿಸದೆ ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಳ್ಳುತ್ತಿರುವ ಘಟನೆಗಳು ನಡೆಯುತ್ತಿತ್ತು. ಇದೀಗ ಚುನಾವಣೆಗೆ ನಾಮಪತ್ರವನ್ನೇ ಸಲ್ಲಿಸದೆ ಚುನಾವಣೆಯನ್ನೇ ಬಹಿಷ್ಕರಿಸಲಾಗಿದೆ.