

ಮಡಿಕೇರಿ: ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ೩೦ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡರೆ ವಿಜ್ಞಾನ ಕ್ಷೇತ್ರದಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ. ಇಂತಹ ವಿಜ್ಞಾನ ಸಮಾವೇಶ ಮಕ್ಕಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಿದೆ ಎಂದರು.
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾಸೀನಪ್ಪ ಮಾತನಾಡಿ, ವಿದ್ಯಾರ್ಥಿಗಳು ಇಂತಹ ವಿಜ್ಞಾನ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆಗಿದ್ದಲ್ಲಿ ಮಾತ್ರ ವಿಜ್ಞಾನ ಕ್ಷೇತ್ರದಲ್ಲಿ ಡಾ.ಅಬ್ದುಲ್ ಕಲಾಂ, ಸರ್.ಎಂ.ವಿಶ್ವೇಶ್ವರಯ್ಯ, ಸರ್ ಸಿ.ವಿ.ರಾಮನ್ ಅವರ ಮಾದರಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಮತ್ತು ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಮಕ್ಕಳ ವಿಜ್ಞಾನ ಸಮಾವೇಶ ಸೂಕ್ತ ವೇದಿಕೆ ಕಲ್ಪಿಸುತ್ತದೆ ಎಂದರು.
ಸಂಸ್ಥೆಯ ಕರೆಸ್ಪಾಡೆಂಟ್ ಎಸ್.ಐ.ಮುನೀರ್ ಅಹ್ಮದ್, ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜಿ.ಶ್ರೀನಾಥ್, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಪದಾಧಿಕಾರಿ ಎಂ.ಎನ್.ವೆಂಕಟನಾಯಕ್, ಸಂಸ್ಥೆಯ ಉಪಾಧ್ಯಕ್ಷ ಸಿ.ಎ.ಅನೀಸ್,
ಖಜಾಂಚಿ ಫಯಾಜ್ ಅಹ್ಮದ್, ನಿರ್ದೇಶಕ ಲಿಯಾಖತ್ ಆಲಿ, ಪ್ರಿನ್ಸಿಪಾಲ್ ಜಾಯ್ಸ್ ವಿನಯ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಎಂ.ಎಚ್.ಮುಬೀನಾ ಇತರರು ಇದ್ದರು.