

ಸೊರಬ: ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶೀಘ್ರದಲ್ಲಿಯೇ ಸಿಸಿ ಕ್ಯಾಮರಾ ಅಳವಡಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.
ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ಸಭಾ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿ, ಚಂದ್ರಗುತ್ತಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ವಿಶೇಷ ದಿನಗಳಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ದೇವಸ್ಥಾನ ಸಮಿತಿ ಹಾಗೂ ಸ್ಥಳೀಯ ಗ್ರಾಪಂಗೆ ಸೂಚನೆ ನೀಡಲಾಗಿದೆ. ಟ್ರಾಫಿಕ್ ಸಮಸ್ಯೆ ಆಗದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೂಲಕ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು ಎಂದರು.
ಸೊರಬ ಠಾಣೆಯ ಸಿಬ್ಬಂದಿ ಚಂದ್ರಗುತ್ತಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸಂಬಂಧಿಸಿದಂತೆ 30 ಆಯಕಟ್ಟಿನ ಸ್ಥಳಗಳನ್ನು ಗುರುತಿಸಿದ್ದಾರೆ. ರಾತ್ರಿ ವೇಳೆಯಲ್ಲಿಯೂ ಸ್ಪಷ್ಟವಾಗಿ ಚಿತ್ರೀಕರಣವಾಗುವಂತೆ 40 ಸಿಸಿ ಕ್ಯಾಮರಾ ಅಳವಡಿಸುವ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ನೀಡಲಾಗುವುದು. ಮುಂದಿನ ಒಂದು ತಿಂಗಳಲ್ಲಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಸಭೆ ಆರಂಭವಾಗುತ್ತಿದ್ದಂತೆ ಗ್ರಾಪಂ ಉಪಾಧ್ಯಕ್ಷ ರೇಣುಕಾಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಮಾತನಾಡಿದರು.
ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಎಸ್ಪಿ ಮಿಥುನ್‌ಕುಮಾರ್, ಕೆಲ ಬಂಧಿತ ಆರೋಪಿಗಳು ಕೆಲವೇ ದಿನಗಳಲ್ಲಿ ಜಾಮೀನಿನ ಮೇಲೆ ಹೊರ ಬರುತ್ತಾರೆ ಎನ್ನುವುದು ಜನರ ಮನಸ್ಸಿನಲ್ಲಿದೆ. ಪೊಲೀಸ್ ಇಲಾಖೆಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗುತ್ತದೆ. ಪ್ರಕರಣ ಯಾವ ಹಂತದಲ್ಲಿದೆ ಎನ್ನುವುದಕ್ಕಿಂತ ಆರೋಪಿತರಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವುದು ಮುಖ್ಯವಾಗುತ್ತದೆ. ಚಂದ್ರಗುತ್ತಿಯ ಉಪ ಪೊಲೀಸ್ ಠಾಣೆಗೆ ಹೆಚ್ಚಿನ ಸಿಬ್ಬಂದಿ ನೇಮಿಸಲಾಗುವುದು ಜತೆಗೆ ನಾಲ್ವರು ಗೃಹರಕ್ಷಕರನ್ನು ನೇಮಿಸುವುದಾಗಿ ತಿಳಿಸಿದರು.
ಇದಕ್ಕೂ ಮೊದಲು ಮಿಥುನ್‌ಕುಮಾರ್ ಅವರು ಶ್ರೀ ರೇಣುಕಾಂಬೆ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು, ದೇವಸ್ಥಾನ ಹಾಗೂ ಸುತ್ತ ಪರಿಶೀಲನೆ ನಡೆಸಿದರು. ಶಿಕಾರಿಪುರ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸಿಪಿಐ ಎಲ್.ರಾಜಶೇಖರ್, ಪಿಎಸ್‌ಐ ಎಚ್.ಎನ್.ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸನ್ನ ಶೇಟ್, ಕಾರ್ಯನಿರ್ವಹಣಾಧಿಕಾರಿ ವಿ.ಎಲ್.ಶಿವಪ್ರಸಾದ್, ಶ್ರೀ ರೇಣುಕಾಂಬಾ ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ. ಆರ್.ಶ್ರೀಧರ್ ಹುಲ್ತಿಕೊಪ್ಪ, ಗ್ರಾಪಂ ಸದಸ್ಯ ಎಂ.ಪಿ.ರತ್ನಾಕರ, ತಾಪಂ ಮಾಜಿ ಸದಸ್ಯ ಎನ್.ಜಿ.ನಾಗರಾಜ್, ರಘು ಸ್ವಾಧಿ ಇತರರಿದ್ದರು.