ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

accident
Published on

ಶಿವಮೊಗ್ಗ: ಸಕ್ರೆಬೈಲು ಸಮೀಪ ಮಂಗಳವಾರ ಸಂಜೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ.

ಮಂಡಗದ್ದೆಯಿಂದ ಶಿವಮೊಗ್ಗಕ್ಕೆ ಬರುತ್ತಿರುವ ವೇಳೆ ಕಾರು ಸಕ್ರೆಬೈಲು ಸಮೀಪ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಶಿವಮೊಗ್ಗ ವೆಂಕಟೇಶ ನಗರದ ಸನತ್(22) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಉಜ್ಜನೀಪುರದ ರುದ್ವಿಕ್ ಮತ್ತು ಅನೋಕ್ ಎಂಬುವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ.

ರುದ್ವಿಕ್‌ನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಹಾಗೂ ಅನೋಕ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಮಂಡಗದ್ದೆಯಲ್ಲಿ ಊಟ ಮುಗಿಸಿ ವಾಪಸ್ ಶಿವಮೊಗ್ಗಕ್ಕೆ ಬರುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಈ ಮಾರ್ಗದಲ್ಲಿ ಮೊದಲ ಬಾರಿಗೆ ಸಂಚರಿಸುವವರಿಗೆ ತಿರುವಿನ ಬಗ್ಗೆ ಮಾಹಿತಿ ಇರುವುದಿಲ್ಲ. ಇದೇ ಅಪಘಾತಕ್ಕೆ ಮುಖ್ಯ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕ್ಷಣ ಮಾತ್ರದಲ್ಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿದೆ. ಕಳೆದ ವರ್ಷ ಇದೇ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net