

ಹೊಳೆನರಸೀಪುರ: ಗ್ರಾಮೀಣ ಜನತೆ ಪರಿಸರ ಮತ್ತು ಗ್ರಾಮದ ಸ್ವಾಸ್ಥ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಿದರೆ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾಧ್ಯ ಎಂದು ಮೂಡಲಹಿಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ ತಿಳಿಸಿದರು.
ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಶೌಚಗೃಹಗಳ ವ್ಯವಸ್ಥೆಗೆ ಒತ್ತು ನೀಡಲಾಗಿದೆ. ಪ್ರತಿಯೊಬ್ಬರೂ ಶೌಚಗೃಹಗಳ ಬಳಕೆಯನ್ನು ತಪ್ಪದೆ ಮಾಡಿದಾಗ ಪರಿಸರ ಮಾಲಿನ್ಯ ನಿಯಂತ್ರಿಸುವ ಜತೆಯಲ್ಲಿ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಕಾರ್ಯ ನಿರ್ವಹಿಸುತ್ತದೆ.
ಸರ್ಕಾರದ ಆದೇಶದ ಅನುಸಾರ ಪರಿಸರಕ್ಕೆ ಮಾರಕವಾಗಿರುವ ಕಸ ನಿರ್ವಹಣೆಗೆ ಘನತ್ಯಾಜ್ಯ ಸಂಗ್ರಹಣೆಗೆ ಪ್ರತಿ ಕುಟುಂಬಕ್ಕೂ ಬಕೆಟ್ ವಿತರಿಸಲಾಗಿದೆ. ಹಸಿ ಮತ್ತು ಒಣಕಸ ಪ್ರತ್ಯೇಕಿಸಿ ನೀಡುವಂತೆ ಕೋರಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕಚೇರಿಯ ಮೇಲ್ವಿಚಾರಕ ಕೆ.ವಿನಯ್ ಮಾತನಾಡಿ, ಸೊಳ್ಳೆಗಳ ನಿಯಂತ್ರಣ, ಕರೊನಾ ವೈರಸ್‌ನಿಂದ ರಕ್ಷಣೆಗೆ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸೂಚಿಸಿ, ರೋಗಾಣುವಿನ ಭೀಕರತೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಮೂಡಲಹಿಪ್ಪೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರಮ್ಯಾ ಮತ್ತು ಗ್ರಾ.ಪಂ. ಅಧ್ಯಕ್ಷ ಕುಮಾರ್ ಮಾತನಾಡಿದರು.
ಹಳೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕ ಆರ್.ಬಿ.ಪುಟ್ಟೇಗೌಡ, ಸಾಹಿರಾಭಾನು, ಮಂಜುಳ, ಶಿಕ್ಷಕಿ ಭಾರತಿ, ವೀಣಾ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.