

ವಿರಾಜಪೇಟೆ: ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನಿರಂತರ ಮಳೆಯಿಂದಾಗಿ ತೊಂದರೆ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆ ಆವರಣದಲ್ಲಿರುವ ಸಭಾಂಗಣದಲ್ಲಿ ಸೋಮವಾರ ಕಾಳಜಿ ಕೇಂದ್ರ ಆರಂಭವಾಯಿತು.
ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಕಡೆ ಸಂಚಾರವೇ ಕಷ್ಟಸಾಧ್ಯ ಎಂಬ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಬರುವ ನಿರಾಶ್ರಿತರಿಗೆ ಬೇಕಾದ ಎಲ್ಲ ಪೂರ್ವ ಸಿದ್ಧತೆ ಮಾಡಲಾಗಿದೆ. ಇದರೊಂದಿಗೆ ನಗರದಲ್ಲಿ ಗುರುತಿಸಿದ ಕೆಲ ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ನೋಟಿಸ್ ನೀಡಲಾಗಿದ್ದು ಇದುವರೆಗೂ ಕಾಳಜಿ ಕೇಂದ್ರಕ್ಕೆ ಯಾರೂ ರವಾನೆಯಾಗಿಲ್ಲ.