

ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿಲ್ಲ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಎಂಜಿ ರಸ್ತೆಯ ಹಳೇ ಜೆಎಸ್‌ಎಸ್ ಆಸ್ಪತ್ರೆ ಕಟ್ಟಡದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದವರಿಗೆ ಸನ್ಮಾನ, ಸುತ್ತೂರು ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿವಿಧ ಸಮುದಾಯಗಳು ವಿವಿಧ ಜಯಂತಿಗಳನ್ನು ಅದ್ದೂರಿಯಾಗಿ ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಯಾ ಸಮುದಾದವರು ಸೇರುತ್ತಿದ್ದಾರೆ. ಆದರೆ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತರು ಸೇರಿದರು. ಆ ಸಂದರ್ಭ ನಾವು ಸಹ ಕಾರ್ಯಕ್ರಮಕ್ಕೆ ಸಹಕಾರ ನೀಡಿದೆವು. ಆದರೆ, ಇದೀಗ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬಸವ ಜಯಂತಿ ಹಮ್ಮಿಕೊಂಡಾಗ ‘ನಮ್ಮ ಅಧಿಕಾರವಿಲ್ಲವಲ್ಲ’ ಎಂದು ಬಸವ ಜಯಂತಿಯಿಂದ ನಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿಲ್ಲ. ಇಂತಹ ಪರಿಸ್ಥಿತಿ ಇದ್ದಾಗ ಖಂಡಿತವಾಗಿ ನಾವು ಎಂದಿಗೂ ಉದ್ದಾರವಾ ಗಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.