

ಮಡಿಕೇರಿ:
ಹವಾಮಾನ ವೈಪರಿತ್ಯದಿಂದ ಅತಿವೃಷ್ಟಿ ಉಂಟಾಗಿದ್ದು, ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಆಗಸ್ಟ್ ತಿಂಗಳಲ್ಲಿಯೂ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ಸಿವಿಲ್ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿದ್ದಾರೆ. ಮಳೆಹಾನಿ ಪ್ರದೇಶಗಳಿಗೆ ಭೇಟಿ ನಂತರ ಅತ್ತೂರು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಸರ್ಕಾರ ಜಿಲ್ಲಾಡಳಿತದ ಜತೆ ಸದಾ ಸ್ಪಂದಿಸಿದೆ. ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಪ್ರದೇಶವನ್ನು ಜಿಎಸ್‌ಐ ತಾಂತ್ರಿಕ ಸಂಸ್ಥೆ ಅಧ್ಯಯನ ಮಾಡಿ ವರದಿ ನೀಡಿದ್ದು, ಗುಡ್ಡು ಕುಸಿಯುವ ಪ್ರದೇಶಗಳಲ್ಲಿ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ 100 ಕೋಟಿ ರೂ. ಮಂಜೂರು ಮಾಡಿದ್ದಾರೆ. ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿಯುವುದನ್ನು ತಡೆಯುವ ಅಗತ್ಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಲು 300 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ.
ಮುಂಗಾರು ಸಂದರ್ಭದಲ್ಲಿ ರಾಜ್ಯದಲ್ಲಿ ವಿವಿಧ ರೀತಿಯ ರಸ್ತೆ, ವಿದ್ಯುತ್, ಮನೆ, ಗುಡ್ಡ ಕುಸಿತ, ಹೀಗೆ ಹಲವು ರೀತಿಯ ಆಸ್ತಿ ಪಾಸ್ತಿ ಹಾನಿಯಾಗಿದೆ. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಜನರು ಸ್ವಯಂ ಪ್ರೇರಣೆಯಿಂದ ಸ್ಥಳಾಂತರವಾಗಬೇಕು. ಜಿಲ್ಲಾಡಳಿತ ಆ ನಿಟ್ಟಿನಲ್ಲಿ ನಿಷ್ಠುರವಾಗಿ ನಡೆದುಕೊಳ್ಳಬೇಕು ಎಂದರು.
ನAತರ ಇಬ್ಬರು ಸಚಿವರು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಕೃಷ್ಣ ಬೈರೇಗೌಡ, ಸರ್ಕಾರ ಅಗತ್ಯ ಪರಿಹಾರ ನೀಡುವುದರ ಜತೆಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಾಣ ಮಾಡಿಕೊಡಲಿದೆ. ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ಸದ್ಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತಾಗಬೇಕು. ಸಂತ್ರಸ್ತರು ಆರೋಗ್ಯ ಕಡೆ ಗಮನಹರಿಸಬೇಕು. ಕಾಳಜಿ ಕೇಂದ್ರದಲ್ಲಿ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸಮಸ್ಯೆಗಳಿದ್ದಲ್ಲಿ ತಹಸೀಲ್ದಾರರು ಅಥವಾ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು. ಶಾಸಕ ಡಾ.ಮಂತರ್ ಗೌಡ ಮಾತನಾಡಿ ಸರ್ಕಾರ ಸಂತ್ರಸ್ತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲಿದ್ದು, ಧೈರ್ಯದಿಂದ ಬದುಕು ಕಟ್ಟಿಕೊಳ್ಳುವತ್ತ ಮುನ್ನಡೆಯಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಹಸೀಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಡಿಪಿ ಸದಸ್ಯೆ ಸುನಿತಾ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಇತರರು ಇದ್ದರು.