

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಸಂಕಷ್ಟ ಸ್ಥಿತಿ ಎದುರಾಗಿದ್ದು, ಕೇಂದ್ರ ಸರ್ಕಾರ ಪರಿಣತರ ತಂಡವನ್ನು ಕಳಿಸಿಕೊಟ್ಟು, ವಾಸ್ತವಾಂಶಗಳ ಪರಿಶೀಲನೆಗೆ ಮುಂದಾಗಬೇಕು. ಕೇಂದ್ರ ಸಂಪುಟದಲ್ಲಿರುವ ರಾಜ್ಯದ ಪ್ರತಿನಿಧಿಗಳು ಕರ್ನಾಟಕದ ಹಿತ ಕಾಪಾಡಬೇಕು. ಹಿಂದೆ ಅನಂತಕುಮಾರ್ ಪಕ್ಷಾತೀತವಾಗಿ ಕೊಡುತ್ತಿದ್ದ ಸಹಕಾರವನ್ನು ಈಗ ನೆನಪಿಸಿಕೊಳ್ಳಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಈಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಪರಿಣತರ ತಂಡ ಖುದ್ದು ಪರಿಶೀಲಿಸಿದ ನಂತರ ತನ್ನ ವರದಿ ನೀಡಿದ ಮೇಲಷ್ಟೆ ಮುಂದಿನ ಹೆಜ್ಜೆ ಏನೆಂದು ಯೋಚಿಸಬಹುದು. ಇಂತಹ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರೆಲ್ಲ ಸೇರಿಕೊಂಡು ರಾಜ್ಯದ ಸ್ಥಿತಿಯನ್ನು ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಇದರ ಜತೆಯಲ್ಲೇ ಬರಗಾಲದ ವರ್ಷಗಳಲ್ಲಿ ಕಾವೇರಿ ನೀರಿನ ಹಂಚಿಕೆ ಹೇಗಿರಬೇಕು ಎನ್ನುವುದಕ್ಕೆ ಸಂಕಷ್ಟ ಸೂತ್ರವನ್ನು ಕೇಂದ್ರ ರೂಪಿಸಬೇಕು ಎಂದು ಅವರು ಪ್ರತಿಪಾದಿಸಿದರು.
ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ವಿವಾದವು ಸುಪ್ರೀಂ ಕೋರ್ಟ್ ಮುಂದೆ ಬಂದಾಗ ತಮಿಳುನಾಡಿನವರು ಬೆಂಗಳೂರಿಗೆ ನೀರು ಕೊಡಬಾರದು ಎಂದು ತಕರಾರು ತೆಗೆದರು. ಆದರೆ ರಾಜ್ಯದ ವಕೀಲರ ತಂಡ ಸಮರ್ಥವಾಗಿ ಕೆಲಸ ಮಾಡಿ, ನಮ್ಮ ವಾದಕ್ಕೆ ಬೆಲೆ ಸಿಕ್ಕುವಂತೆ ನೋಡಿಕೊಂಡಿತು. ಇದರಿಂದ ಮೇಕೆದಾಟು ಅಣೆಕಟ್ಟು ವಿಚಾರಕ್ಕೂ ಬೆಲೆ ಬಂತು. ಆದರೆ ಇದರಿಂದ ತಮಗೂ ಲಾಭವಿದೆ ಎನ್ನುವುದನ್ನು ತಮಿಳುನಾಡು ಅರ್ಥ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಇದರಲ್ಲೂ ಕೇಂದ್ರ ಸರಕಾರವು ಮಧ್ಯೆ ಪ್ರವೇಶಿಸಬೇಕು ಎಂದು ಅವರು ನುಡಿದರು.
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.