ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ: ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ

Cauvery Protest
Published on

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿರುವ ಧರಣಿ ಶನಿವಾರವೂ ಮುಂದುವರೆಯಿತು. ಅಂತೆಯೇ ಜೆಡಿಎಸ್ ನಾಯಕರು ಪಾಲ್ಗೊಳ್ಳುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕೆಂದು ಸೂಚಿಸಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಹೋರಾಟಗಾರರಿಗೆ ಮಾತುಕೊಟ್ಟಿದೆ. ಜತೆಗೆ ಸರ್ವಪಕ್ಷ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ದೃಢ ನಿರ್ಧಾರವನ್ನು ಪ್ರಕಟಿಸಿದೆ. ಕಾನೂನು ತಜ್ಞರ ತಂಡದ ಜತೆಗೆ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಹೆಚ್ಚಿನ ಜ್ಞಾನವುಳ್ಳ ಕಾನೂನು ಪಂಡಿತರನ್ನೂ ತಂಡದೊಂದಿಗೆ ಸೇರಿಸಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಈಗಾಗಲೇ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ. ಹಿಂಗಾರುವ ಬರುವ ಸಾಧ್ಯತೆಗಳೂ ಕಡಿಮೆ ಇದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹವೂ ಕುಸಿದಿದೆ. ಈಗಿರುವ ನೀರು ಕುಡಿಯುವ ನೀರಿಗಷ್ಟೇ ಸೀಮಿತ ಮಾಡಲು ಸಾಧ್ಯ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಪಕವಾಗಿ ಸುಪ್ರೀಂ ಮತ್ತು ಪ್ರಾಧಿಕಾರದ ಮುಂದೆ ಮಂಡಿಸಿ ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದರು.

ಪ್ರಾಧಿಕಾರದ ಸೂಚನೆ ಮೇರೆಗೆ ಈಗಾಗಲೇ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಸರ್ಕಾರ ರೈತರು ಮತ್ತು ಜನತೆಗೆ ದ್ರೋಹಬಗೆದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಇಂತಹ ನಿಲುವು ಗೊಂದಲಕಾರಿಯಾಗಿದ್ದು, ಸ್ಪಷ್ಟ ನಿರ್ಧಾರ ಮಾಡದೆ ಇರುವುದು ಅನುಮಾನ ಮೂಡಿಸಿದೆ. ರಾಜಕೀಯ ಕಾರಣಕ್ಕೆ ನೆರೆ ರಾಜ್ಯಕ್ಕೆ ನೀರು ಬಿಡುವ ಹುನ್ನಾರ ಮಾಡುತ್ತಿದೆ. ಕುಡಿಯುವ ನೀರಿಗೆ ಕಾವೇರಿ ಕೊಳ್ಳದ ಜಲಾಶಯಗಳನ್ನು ಅವಲಂಬಿಸಿರುವ ಬೆಂಗಳೂರು ಮತ್ತು ಮೈಸೂರಿನ ಜನತೆ ಕಾವೇರಿ ಹೋರಾಟ ಬೆಂಬಲಿಸಿ ಪ್ರತಿಭಟನೆಗೆ ಮುಂದಾಗಬೇಕು. ಇಲ್ಲದಿದ್ದರೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿ ಮುಂದಿನ ಪೀಳಿಗೆಗೆ ಕಾವೇರಿ ವಿಚಾರದಲ್ಲಿ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಮಾಜಿ ಶಾಸಕರಾದ ಸುರೇಶ್‌ಗೌಡ, ಕೆ.ಟಿ.ಶ್ರೀಕಂಠೇಗೌಡ, ಜಿ.ಬಿ.ಶಿವಕುಮಾರ್, ಡಾ.ಕೆ.ಅನ್ನದಾನಿ, ರೈತ ಹಿತ ರಕ್ಷಣಾ ಸಮಿತಿಯ ಸುನಂದಾ ಜಯರಾಂ, ತಗ್ಗಹಳ್ಳಿ ವೆಂಕಟೇಶ್, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net