ತ.ನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ: ಸಕ್ಕರೆನಾಡಲ್ಲಿ ಕಟ್ಟೆಯೊಡೆದ ಪ್ರತಿಭಟನಾಕಾರರ ಆಕ್ರೋಶ

Cauvery Protest
Published on

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಮತ್ತೆ ಆದೇಶ ಮಾಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ರೈತರ ಆಕ್ರೋಶದ ಕಟ್ಟೆ ಹೊಡೆದಿದೆ. ಪ್ರಾಧಿಕಾರದ ಆದೇಶ ವಿರೋಧಿಸಿ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿಗಿಳಿದು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿ ಖುದ್ದು ಹಾಜರಾಗಿ ವಾಸ್ತವ ಸ್ಥಿತಿ ಮನವರಿಕೆ ಮಾಡಿ ಕೊಟ್ಟಿಲ್ಲ. ರಾಜ್ಯ ಸರ್ಕಾರ ತನ್ನ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ, ರೈತರಿಗೆ ನಿರಂತರವಾಗಿ ದ್ರೋಹ ಮಾಡುತ್ತಾ ಬಂದಿದೆ. ಆಗಸ್ಟ್ ತಿಂಗಳಿನಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರ ಮತ್ತೆ ನೀರು ಬಿಡಲಾಗಿದೆ, ಇದರಿಂದ ಕಾವೇರಿಕೊಳ್ಳದ ಜಲಾಶಯಗಳು ಬರಿದಾಗಿವೆ, ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ 96 ಅಡಿಗೆ ಕುಸಿದಿದೆ, ಬೆಳೆ ರಕ್ಷಣೆಗೆ ನೀರಂತೂ ಇಲ್ಲ,ಕುಡಿಯುವ ನೀರು ಸಹ ಇಲ್ಲದಂತಾಗಲಿದೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿದರು.

ಕಾವೇರಿ ನದಿ ನೀರು ಪ್ರಾಧಿಕಾರ ವಾಸ್ತವ ಸ್ಥಿತಿ ಅರಿಯದೆ, ಕಾವೇರಿ ಕೊಳ್ಳದ ಜಲಾಶಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸದೆ ನೀರು ಹರಿಸಿ ಎಂದು ಹೇಳುತ್ತಿರುವುದು ಅವೈಜ್ಞಾನಿಕ. ಎರಡು ರಾಜ್ಯಗಳ ನಡುವೆ ಸಂಘರ್ಷವನ್ನುಂಟು ಮಾಡುತ್ತಿರುವ ಕೇಂದ್ರ ಸರ್ಕಾರ ಈ ಕೂಡಲೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದು ಮಾಡಬೇಕು. ಪ್ರಾಧಿಕಾರದ ಆದೇಶ ಕುರಿತಂತೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸರ್ಕಾರದ ನಿಲುವು ಪ್ರಕಟಿಸಬೇಕು, ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.

ರೈತ ಹಿತರಕ್ಷಣ ಸಮಿತಿಯ ಸುನಂದಾ ಜಯರಾಂ, ಕೆ ಬೋರಯ್ಯ, ರೈತ ಸಂಘದ ಇಂಡುವಾಳು ಚಂದ್ರಶೇಖರ್. ಮುದ್ದೇಗೌಡ, ಸಿದ್ದರಾಮೇಗೌಡ  ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net