

ಮಂಡ್ಯ: ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ ಜೆಡಿಎಸ್, ಎರಡು ದಿನಗಳೊಳಗೆ ನೀರು ನಿಲ್ಲಿಸದಿದ್ದಲ್ಲಿ ಸೆ.2ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಹಾಲಿ ಹಾಗೂ ಮಾಜಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.
ನಗರ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಕೆ.ಟಿ.ಶ್ರೀಕಂಠೇಗೌಡ, ಡಾ.ಅನ್ನದಾನಿ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಕಾವೇರಿ ನೀರಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಈಗ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಈ ಸರ್ಕಾರದಲ್ಲಿ ರೈತರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದೆ. ಯಾರ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂಬುದು ಗೊತ್ತಿಲ್ಲ. ಸರ್ವ ಪಕ್ಷ ಸಭೆಯಲ್ಲಿ ರೈತರ ಹಾಗೂ ರಾಜ್ಯದ ಹಿತಕ್ಕೆ ಬದ್ಧ ಎಂದಿದ್ದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿಯಿಂದಲೇ ನೀರು ಬಿಟ್ಟಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.
ಮೇಕೆದಾಟು ಯೋಜನೆ ಹೆಸರೇಳಿಕೊಂಡು ಪಾದಯಾತ್ರೆ ನಡೆಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಅದನ್ನು ಮರೆತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದ ದಾಹದಿಂದಾಗಿ ಕಾಂಗ್ರೆಸ್ ಪಕ್ಷದ ಪರವಾಗಿರುವ ತಮಿಳುನಾಡು ಮುಖ್ಯಮಂತ್ರಿಯ ಓಲೈಕೆಗೆ ಮುಂದಾಗಿ ನೀರು ಹರಿಸುವ ಮೂಲಕ ರಾಜ್ಯದ ರೈತರು ಹಾಗೂ ಜನರನ್ನು ಬಲಿಕೊಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
135 ಸ್ಥಾನಗಳನ್ನು ಗೆದ್ದಿದ್ದೇವೆ ಎಂಬ ಅಹಂನಿಂದ ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಈಗಾಗಲೇ ರೈತರು ಸಾಲ ಸೂಲ ಮಾಡಿ ಒಟ್ಟಲು ಹಾಗೂ ನಾಟಿ ಮಾಡಿದ್ದಾರೆ. ಇಲ್ಲಿಯ ರೈತರ ಬೆಳೆಗಳನ್ನು ರಕ್ಷಿಸದೆ ತಮಿಳುನಾಡಿನವರು ಮೂರನೇ ಬೆಳೆಯಾಗಿ ಬೆಳೆಯುವ ಕುರುವೈ ಬೆಳೆಗೆ ನೀರು ಹರಿಸಿ ಅಲ್ಲಿಂದಲೇ ಅಕ್ಕಿ ತರುವ ಯೋಚನೆ ಮಾಡಿದ್ದಾರೆಯೇ ಎಂದು ಟೀಕಿಸಿದರು.