

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಪಟಾಕಿ ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ೪೦ ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಎಚ್‌ಎಎಲ್ ಮೂರನೇ ಹಂತದ ನ್ಯೂ ತಪ್ಪಿಸಂದ್ರ ರಸ್ತೆಯ ದಹಿಯಾ ಮಾರ್ಟ್ ಮಾಲೀಕ ಶರವಣ, ಆತನ ಸಹೋದರ ಹುಕ್ಕೂಂ ಸಿಂಗ್, ಉಲ್ಲಾಳ ಮುಖ್ಯರಸ್ತೆಯ ಗವಿಪುರಂ ಲೇಔಟ್‌ನ ಶ್ರೀನಿವಾಸ್ ಬಂಧಿತರು.
ನ್ಯೂ ತಿಪ್ಪಸಂದ್ರ ಮುಖ್ಯರಸ್ತೆಯ ದಹಿಯಾ ಎಂಬ ಮಾರ್ಟ್‌ನಲ್ಲಿ ಸರ್ಕಾರದ ಪರವಾನಗಿ ಪಡೆಯದೆ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಾರ್ಟ್ ಮೇಲೆ ದಾಳಿ ಮಾಡಿ ಮಾರ್ಟ್ ಮಾಲೀಕ ಶರವಣ ಮತ್ತು ಆತನ ಸಹೋದರ ಹಕ್ಕೂಂ ಸಿಂಗ್ ಎಂಬಾತನ್ನು ಬಂಧಿಸಲಾಗಿದೆ. ಮಾರ್ಟ್‌ನಲ್ಲಿ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಅಪಾಯಕಾರಿ ಸ್ಥಿತಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ ಮಾರ್ಟ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ೨೫ ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಜೀವನಭೀಮಾನಗರ ಪೊಲೀಸ್ ಠಾಣೆಯಲ್ಲಿ ಸ್ಫೋಟ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ವಾಣಿಜ್ಯ ಕಟ್ಟಡದಲ್ಲಿ ಸಂಗ್ರಹಿಸಿ ಮಾರಾಟ:
ಮತ್ತೊಂದು ಪ್ರಕರಣದಲ್ಲಿ ಮಲ್ಲತಹಳ್ಳಿ ಹನುಮಕ್ಕ ಲೇಔಟ್‌ನ ಜನವಸತಿ ಪ್ರದೇಶದ ವಾಣಿಜ್ಯ ಕಟ್ಟಡದಲ್ಲಿ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ಮಾಡಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕ ಶ್ರೀನಿವಾಸ್ ಎಂಬಾತನನ್ನು ಬಂಧಿಸಿ, ೧೫ ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಹಿಳಾ ಸಂರಕ್ಷಣೆ ದಳ ಮತ್ತು ವಿಶೇಷ ವಿಚಾರಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.