ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗಲೇ ಬಂಧಿಸಿದ ಸಿಸಿಬಿ ಪೊಲೀಸರು

mng--25 Feb Ashif
Published on

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ/ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ನೋರ್ವನನ್ನು ಮಂಗಳವಾರ ಬಂಧಿಸಿ ಆತನಿಂದ 27 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳ ತಾಲೂಕು ಸಜೀಪಮೂಡ ಗ್ರಾಮದ ನಗ್ರಿ ಸುಭಾಷ್ ನಗರ ಮನೆ ಆಸೀಫ್ ಯಾನೆ ಆಚಿ (32) ಬಂಧಿತ. ಈತ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಬೆಂಗಳೂರಿನಲ್ಲಿ ಖರೀದಿಸಿ ಮಂಗಳೂರಿಗೆ ಸಾಗಾಟ ಮಾಡಿ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನೆಹರೂ ಮೈದಾನದ ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಆತನ ವಶದಿಂದ 1,35,000 ರೂ. ಮೌಲ್ಯದ 27 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,45,500 ರೂ. ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈತನ ವಿರುದ್ಧ ಈ ಹಿಂದೆ 2018 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ, 2021 ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ 2023 ನೇ ಇಸವಿಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ 3 ಪ್ರಕರಣ ದಾಖಲಾದೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ. ಅವರ ನೇತೃತ್ವದಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ, ಎಎಸ್‌ಐ ಸುಜನ್ ಶೆಟ್ಟಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net