ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ ಸಿಸಿಬಿ ಪೊಲೀಸರ ಕಾರ್ಯಾಚರಣೆ

mng--11 April Asgar Ali
Published on

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ 10 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಮೂಲತಃ ದೇರಳಕಟ್ಟೆ ಕಿನ್ಯದವನಾಗಿದ್ದು, ಪ್ರಸ್ತುತ ಸುರತ್ಕಲ್ ಕೃಷ್ಣಾಪುರ ನಿವಾಸಿ ಮೊಹಮ್ಮದ್ ಆಸೀಫ್ (24), ಮುಕ್ಕ ಸಸಿಹಿತ್ಲು ರಸ್ತೆ ನಿವಾಸಿ ಅಸ್ಗರ್ ಆಲಿ (31) ಹಾಗೂ ಸುರತ್ಕಲ್ ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ ಮೊಹಮ್ಮದ್ ರಶೀಮ್ (24) ಬಂಧಿತರು.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖಾಸಗಿ ಬಸ್ಸಿನಲ್ಲಿ ಪಾರ್ಸೆಲ್ ಮೂಲಕ ಸಾಗಾಟ ಮಾಡಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಇನ್ನೋವಾ ಕಾರಿನಲ್ಲಿ ಮುಕ್ಕ-ಮಾಲೆಮಾರ್ ಬೀಚ್ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ವಶದಿಂದ 1 ಲಕ್ಷ ರೂ. ಮೌಲ್ಯದ 10 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, 4000 ರೂ., 4 ಮೊಬೈಲ್ ಫೋನ್ ಗಳು, ಟೊಯೊಟಾ ಇನ್ನೋವಾ ಕಾರು ಸಹಿತ ಒಟ್ಟು ರೂ. 9,24,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಬಸ್ ನಲ್ಲಿ ಪಾರ್ಸೆಲ್ ಮೂಲಕ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 2 ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ಅವರ ನೇತೃತ್ವದಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net