ಪರಿಸರ ಸ್ನೇಹಿ ದೀಪಾವಳಿ ಆಚರಿಸಿ

venkataraja
Published on

ಮಡಿಕೇರಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ ಪ್ರಕಟಣೆಯಲ್ಲಿ ಮಾಡಿದ್ದಾರೆ.

ಜಿಲ್ಲಾಡಳಿತವು ೨೦೨೪ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

೨೫ ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಹಸಿರು ನ್ಯಾಯ ಪೀಠ, ನವದೆಹಲಿರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.

ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net