ಬಳ್ಳಾರಿ : ಜಿಲ್ಲಾಡಳಿತದಿಂದ ಅ.23ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯ ಆಚರಿಸುತ್ತಿದ್ದು,
ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು ಎಂದು ಎಡಿಸಿ ಮಹಮ್ಮದ್ ಎನ್. ಜುಬೇರ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂದು ಬೆಳಗ್ಗೆ 9 ಗಂಟೆ ಮುನಿಸಿಪಲ್ ಕಾಲೇಜು ಮೈದಾನದಿಂದ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರುಗುಲಿದೆ. ಚನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ಕಿತ್ತೂರು ರಾಣಿ ಚನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಜಯಂತಿಯ ಮೆರವಣಿಗೆಯಲ್ಲಿ ಸಾಂಸ್ಕ್ರತಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ವೇದಿಕೆ ಕಾರ್ಯಕ್ರಮದಲ್ಲಿ ವಚನ ಗಾಯನ ಇರಲಿದೆ ಎಂದರು.
ಕುಡಿವ ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಚನ್ನಮ್ಮನವರ ಕೊಡುಗೆ ಅಪಾರ. ಅಂತಹ ಮಹನೀಯರ ಆಚಾರ-ವಿಚಾರ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಹಾಗಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಎಲ್ಲಾ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.