ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

BLY-7-5
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Published on

ಬಳ್ಳಾರಿ : ಜಿಲ್ಲಾಡಳಿತದಿಂದ ಸಂತ ಸೇವಾಲಾಲ್, ಸವಿತಾ ಮಹರ್ಷಿ, ಛತ್ರಪತಿ ಶಿವಾಜಿ ಮತ್ತು ಸರ್ವಜ್ಞ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಫೆ.15 ರಂದು ಸಂತ ಸೇವಾಲಾಲ್ ಜಯಂತಿಯನ್ನು ವಾಲ್ಮೀಕಿ ಸಮುದಾಯ ಭವನದಲ್ಲಿ, ಫೆ.16 ರಂದು ಸವಿತಾ ಮಹರ್ಷಿ ಜಯಂತಿಯನ್ನು ಬಿಡಿಎಎ ಫುಟ್ಬಾಲ್ ಮೈದಾನ ಸಭಾಂಗಣದಲ್ಲಿ, ಫೆ.19 ರಂದು ಸಂಜೆ ಛತ್ರಪತಿ ಶಿವಾಜಿ ಜಯಂತಿಯನ್ನು ಬಿಡಿಎಎ ಫುಟ್ಬಾಲ್ ಮೈದಾನ ಸಭಾಂಗಣ ಮತ್ತು ಫೆ.20 ರಂದು ಸರ್ವಜ್ಞ ಜಯಂತಿಯನ್ನೂ ಬಿಡಿಎಎ ಪುಟ್ಬಾಲ್ ಮೈದಾನ ಸಭಾಂಗಣದಲ್ಲಿ ಅರ್ಥಪೂರ್ಣ ಆಚರಣೆಗೆ ಕ್ರಮ ವಹಿಸಲಾಗುವುದು ಎಂದರು.

ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆಯೂ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಸಮುದಾಯದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಪಿಎಚ್‌ಡಿ ಪದವಿ ಪಡೆದ ಅಭ್ಯರ್ಥಿಗಳಿದ್ದರೆ ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net