

ಮೈಸೂರು: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಭಾನುವಾರ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು.
ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಚೇರಿ ಮುಂಭಾಗ ಜಮಾವಣೆಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆ.ಪಿ.ನಡ್ಡಾ, ಆರ್.ಅಶೋಕ್, ಬಿ.ವೈ.ವಿಜಯೇಂದ್ರ ಪರ ಘೋಷಣೆ ಕೂಗಿದರು. ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಶಾಸಕ ಶ್ರೀವತ್ಸ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದೇ ಬಿಂಬಿಸಲಾದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಲಿತಾಂಶ ಭಾನುವಾರ ಪ್ರಕಟವಾಗಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಪಡೆದಿದೆ. ಈ ಗೆಲುವಿನೊಂದಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದರು.
ಇಡೀ ದೇಶದಲ್ಲಿ ಬಿಜೆಪಿ ಪರ ಅಲೆ ಇದೆ ಎನ್ನುವುದು ಈ ಫಲಿತಾಂಶದಲ್ಲಿ ಸ್ಪಷ್ಟವಾಗಿದೆ. ಎಲ್ಲರೂ ಮೋದಿ ನಾಯಕತ್ವಕ್ಕೆ ಜೈ ಎಂದಿದ್ದಾರೆ. ಈ ಅಲೆ ಮುಂದಿನ ಎಲ್ಲ ಚುನಾವಣೆಯಲ್ಲೂ ಬಿಜೆಪಿಗೆ ಅನುಕೂಲ ಕಲ್ಪಿಸಲಿದೆ ಎಂದರು.
ಮಾಜಿ ಶಾಸಕ ಎಲ್.ನಾಗೇಂದ್ರ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯದಲ್ಲಿ ಬಿಜೆಪಿಗೆ ಮತ ನೀಡಿರುವ ಎಲ್ಲ ಮತದಾರರಿಗೂ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಗೆ ಕಾರ್ಯಗಳಿಗೆ ಮತದಾರರು ಜೈ ಎಂದಿದ್ದಾರೆ. ಇದೇ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬರುತ್ತದೆ ಎಂದರು.
ಮುಖಂಡರಾದ ವಸಂತ್‌ಕುಮಾರ್, ಪ್ರಮೀಳಾ ಭರತ್, ಜೋಗಿ ಮಂಜು, ಮಹೇಶ್ ರಾಜೇ ಅರಸ್, ಮಹೇಂದ್ರ, ಸತೀಶ್ ಇತರರಿದ್ದರು.