ನ.೨೯ ರಂದು ೬೯ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ

harini vijay
Published on

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ನ.೨೯ ರಂದು ಮೂರ್ನಾಡುವಿನಲ್ಲಿ ೬೯ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಕ.ಸಾ.ಪ ಮೂರ್ನಾಡು ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತೂರು ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರ್ಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲೆ, ಕಾಲೇಜು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಿ.ಎಂ ಶ್ರೀ ಸರ್ಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ೧೧ ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ.ನವೀನ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ವೈದ್ಯರಾದ ಡಾ.ಕುಂಞ ಅಬ್ದುಲ್ಲಾ ಇತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಳುವಂಗಡ ಕಾವೇರಿ ಉದಯ ಅವರ ಪವಿತ್ರ ಪ್ರೀತಿ ಪ್ರಾಪ್ತಿ ಪುಸ್ತಕವನ್ನು ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ ೮ ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯಿಂದ ಮೂರ್ನಾಡು-ಕೊಂಡಂಗೇರಿ ವೃತ್ತದವರೆಗೆ ಮೆರವಣಿಗೆ ಸಾಗಲಿದ್ದು, ನಂತರ ಪಿ.ಎಂ ಶ್ರೀ ಸರ್ಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊನೆಗೊಳ್ಳಲಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಗಮನ ಸೆಳೆಯಲಿದೆ. ಮೆರವಣಿಗೆಯನ್ನು ಹಿರಿಯ ಸಾಹಿತಿ ನಾಗೇಶ್ ಕಾಲೂರು ಹಾಗೂ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಉದ್ಘಾಟಿಸಲಿದ್ದು, ಮೂರ್ನಾಡು ಹೋಬಳಿ ಘಟಕದ ಪದಾಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಎನ್.ಸಿ.ಸಿ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಧ್ವಜವನ್ನು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ ಹಾಗೂ ಕನ್ನಡ ಧ್ವಜವನ್ನು ಕೊಡಗು ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರೌಢಶಾಲೆಯ ೫೧ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಗೆ ಸಂಬಂಧಿಸಿದ ನೃತ್ಯ, ಸ್ಟೆಪ್ ಅಪ್ ಶ್ಯಾಡೋ ತಂಡದಿಂದ ನೃತ್ಯ ವೈಭವ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಪಟ್ಟ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ ಹಾಗೂ ಮೂರ್ನಾಡು ಮುಸ್ಲಿಂ ಯುವಕ ಸಂಘದ ಅಧ್ಯಕ್ಷ ಕೆ.ಎಂ.ಖಾದರ್ ಮಾತನಾಡಿ ಕನ್ನಡ ಹಬ್ಬದಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ ಸದಸ್ಯ ಹಾಗೂ ಮಾಜಿ ಉಪಾಧ್ಯಕ್ಷ ಮುಂಡಂಡ ವಿಜು ತಿಮ್ಮಯ್ಯ ಹಾಗೂ ಕ.ಸಾ.ಪ ಮೂರ್ನಾಡು ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net