

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಹಲವು ಕಾರಣಗಳನ್ನು ಮುಂದಿಟ್ಟುಕೊಂಡು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ (ಜಾತಿಜನಗಣತಿ) ಹಿಂದೇಟು ಹಾಕುತ್ತಿದ್ದ ಶಿಕ್ಷಕರು ಶುಕ್ರವಾರ ಸಮೀಕ್ಷೆಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಗಣತಿ ಚುರುಕುಗೊಳಿಸಿದ್ದಾರೆ.
ಸಮೀಕ್ಷೆ ಬಗ್ಗೆ ನಿರ್ಲಕ್ಷ್ಯ ಧೋರಣೆ ಸೇರಿ ಅನೇಕ ಕಾರಣಗಳನ್ನು ಮುಂದಿಟ್ಟುಕೊಂಡು ಸಮೀಕ್ಷೆಗೆ ಗೈರಾಗುತ್ತಿದ್ದ ಹಲವು ಶಿಕ್ಷಕರ ವಿರುದ್ಧ ಜಿಲ್ಲಾಡಳಿತ ಬೀಸಿದ್ದ ಚಾಟಿ ಕೆಲಸ ಮಾಡಲಾರಂಭಿಸಿದೆ. ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸರ್ಕಾರದ ಆದೇಶದಂತೆ ಕರ್ತವ್ಯಕ್ಕೆ ಗೈರಾಗುವ ಸಿಬ್ಬಂದಿಯನ್ನು ಅಮಾನತು ಮಾಡುವುದಾಗಿ ಶುಕ್ರವಾರ ಎಚ್ಚರಿಕೆ ರವಾನಿಸಿದ್ದರು. ಪರಿಣಾಮವಾಗಿ ಶನಿವಾರ ಮುಂಜಾನೆಯೇ ಹಾಜರಾದ ಬಹುತೇಕ ಶಿಕ್ಷಕರು ಗಣತಿ ಕಾರ್ಯ ಅರಂಭಿಸುವ ಮೂಲಕ ಕರ್ತವ್ಯ ಚುರುಕುಗೊಳಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 22 ಸಾವಿರ ಕುಟುಂಬದ ಸಮೀಕ್ಷೆ ಪೂರ್ಣಗೊಂಡಿದ್ದು, ಇದರಲ್ಲಿ ನೆಲಮಂಗಲ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖುದ್ದು ಪರಿಶೀಲನೆ: ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದು ಮನೆಮನೆಗಳ ಬಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರಿಗೆ ಉತ್ತೇಜನ ನೀಡಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಹೇಳಿದರು.
ಕೆವೈಸಿ ಕಡ್ಡಾಯ:,ಸಾರ್ವಜನಿಕರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ದೇವನಹಳ್ಳಿಯಲ್ಲಿ ಮನೆಮನೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿದ ಸಚಿವರು, ಇನ್ನೂ ಆಧಾರ್‌ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ:
ಸಮೀಕ್ಷೆ ಕಾರ್ಯ ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಅಧಿಕಾರಿಗಳು, ಗಣತಿದಾರರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು. ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು. ಪ್ರತಿ ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು. ಆನ್‌ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.