ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆಯಲ್ಲಿ 1925ರ ಜುಲೈ 8ರಂದು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅಂದಿನ ಆಡಳಿತ ಮೊಕ್ತೇಸರರಾಗಿದ್ದ ಕೃಷ್ಣ ಪಡುವೆಟ್ನಾಯರು ಪ್ರಾರಂಭಿಸಿದ ಶ್ರೀ ಜನಾರ್ದನ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವಷರ್ಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು 2025ರಲ್ಲಿ ಶತಮಾನೋತ್ಸವ ಆಚರಿಸಲು ನಿರ್ಧರಿಸಲಾಗಿದೆ.
ಅಂದು ಜನಾರ್ದನ ಶಾಲೆ ಎಂದೇ ಚಿರಪರಿಚಿತವಾಗಿದ್ದ ಶಾಲೆ ಗ್ರಾಮೀಣ ಪ್ರದೇಶದಲ್ಲಿ ಸಾವಿರಾರು ಮಂದಿಗೆ ಗುಣಮಟ್ಟದ ಶಿಕ್ಷಣ ನೀಡಿದೆ. ಪ್ರಸ್ತುತ ಶಾ ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಡಳಿತಕ್ಕೆ ಒಳಪಟ್ಟಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಎಂದು ಪುನರ್‌ನಾಮಕರಣಗೊಂಡಿದೆ.
ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಸಿ ಜನಾರ್ದನ ಸ್ವಾಮಿ ದೇವಸ್ಥಾನದ ಪ್ರಸಕ್ತ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಅವರನ್ನು ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಊರಿನ ಹಿರಿಯರು, ಮುಖ್ಯಶಿಕ್ಷಕ ಮತ್ತು ಶಿಕ್ಷಕರು, ನಿವೃತ್ತ ಶಿಕ್ಷಕರು, ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.