ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರದ ಅನುಮೋದನೆ

prahlad joshi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ಧಾವಿಸಿದ್ದು, ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಹಾಗೂ ಸೂರ್ಯಕಾಂತಿ ಬೆಳೆ ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಎಫ್​ಎಕ್ಯೂ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಾಲಗೆ 8682 ರೂ. ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಪ್ರತಿಫಲನ ದೊರೆಯದೇ ತೊಂದರೆಗೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ಬಂದಿದೆ. 22,215 ಮೆಟ್ರಿಕ್ ಟನ್ ಹೆಸರು ಕಾಳನ್ನು ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅದೇ ರೀತಿ ಎಫ್​ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್​ಗೆ 7280 ರೂ. ನಂತೆ 13210 ಟನ್ ನಷ್ಟು ಕೇಂದ್ರ ಸರ್ಕಾರ ಖರೀದಿಸಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ರ್ಚಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ರ್ಚಚಿಸಿ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಅದೇ ದಿನ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ತ್ವರಿತವಾಗಿ ರಾಜ್ಯದೆಲ್ಲೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net