ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಅನುಮೋದನೆ

prathap simha Bjp
Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳ ಅಪಘಾತ ವಲಯಗಳಲ್ಲಿ ರಸ್ತೆ ಸುರಕ್ಷತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಅನೇಕ ಬಾರಿ ಕೇಂದ್ರ ಭೂ ಸಾರಿಗೆ, ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಚಿವರು 28 ಕೋಟಿ ರೂ. ಮೊತ್ತದ ಸದರಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆ ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಸುಮಾರು 1.30 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ 7 ಕೋಟಿ ರೂ., ಮೈಸೂರು ಜಿಲ್ಲೆ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಚಿಲ್ಕುಂದ, ಯಶೋದರಾಪುರದ ಬಳಿ ಹಾಗೂ ಬಿಳಿಕೆರೆಯಿಂದ ಕೆ.ಆರ್.ನಗರ ಜಂಕ್ಷನ್‌ವರೆಗೆ ಸುಮಾರು 7.95 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ 15 ಕೋಟಿ ರೂ., ಮೈಸೂರು ಜಿಲ್ಲೆ, ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಮಾರು 1 ಕಿ.ಮೀ. ಉದ್ದದ ರಸ್ತೆಯ ಜಂಕ್ಷನ್ ಅಭಿವೃದ್ಧಿ ಪಡಿಸುವ ಕಾಮಗಾರಿಗೆ 5 ಕೋಟಿ ರೂ. ಹಾಗೂ 1 ಕೋಟಿ ರೂ. ಮೊತ್ತದ 275ರ ಹೆದ್ದಾರಿಯಲ್ಲಿ 2.9 ಕಿ.ಮೀ. ಉದ್ದದ ರಸ್ತೆ ಬದಿ ಆರ್‌ಸಿಸಿ ಡ್ರೈನ್ ನಿರ್ಮಾಣದ ಕಾಮಗಾರಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net