

ಶಿವಮೊಗ್ಗ: ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ಕರ್ನಾಟಕದ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಮಣಿಪುರದಲ್ಲಿ ಹಿಂಸೆ, ಗಲಭೆಗಳು ತಾರಕಕ್ಕೇರಿವೆ. ಆದರೂ ಎಲ್ಲ ಕ್ಷೇತ್ರಗಳಲ್ಲಿ ಬೇಜವಾಬ್ದಾರಿ ನಿಲುವುಗಳಿಂದ ಆಡಳಿತ ನಡೆಸಲು ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಚುನಾವಣೆ ಪೂರ್ವದಲ್ಲಿ ಕಪ್ಪುಹಣವನ್ನು ವಿದೇಶದಿಂದ ವಾಪಸ್ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಒಂಬತ್ತು ವರ್ಷ ಕಳೆದರೂ ಸಾರ್ವಜನಿಕರ ಖಾತೆಗೆ ನಯಾಪೈಸೆ ಬಂದಿಲ್ಲ. ಕಪ್ಪುಹಣ ತರುವ ಬದಲಿಗೆ ಅದಾನಿ, ಅಂಬಾನಿಯಂತಹ ಉದ್ಯಮಿಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗರು ಕೇಂದ್ರದಲ್ಲಿ ಮೋದಿ ಅವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಗಳು ಇದುವರೆಗೂ ಈಡೇರಿಲ್ಲ ಎಂಬುದನ್ನು ಮರೆತಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದು ಕಳೆದ 9 ವರ್ಷದಿಂದ ನಿರುದ್ಯೋಗಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿದೆ. ಜತೆಗೆ ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸುವ ಇಚ್ಛಾಶಕ್ತಿಯನ್ನು ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ಇಸ್ಮಾಯಿಲ್ ಖಾನ್, ಎಸ್.ಕೆ.ಮರಿಯಪ್ಪ, ಎಸ್.ಪಿ.ದಿನೇಶ್, ಎಸ್.ಪಿ.ಶೇಷಾದ್ರಿ, ಸಿ.ಎಸ್.ಚಂದ್ರಭೂಪಾಲ್, ವಿಶ್ವನಾಥ್ ಕಾಶಿ, ಕೆ.ದೇವೇಂದ್ರಪ್ಪ, ವಿಜಯಕುಮಾರ್ ಸಂತೇಕಡೂರು, ಅನಿತಾಕುಮಾರಿ, ಕೆ.ರಂಗನಾಥ ಇತರರಿದ್ದರು.