ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ಧಿಗೆ ಕೇಂದ್ರದ ಅನುಮೋದನೆ

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ
ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ
Published on
ಮಂಗಳೂರು : ಕೇಂದ್ರ ಸರ್ಕಾರ ದ.ಕ. ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ (ಸಿಆರ್‌ಐಎಫ್)ಯಡಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ 82.94 ಕಿ. ಮೀ. ಉದ್ದದ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆ ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಿಗದಿತ ರಸ್ತೆಗಳ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೃಹತ್ ಅನುದಾನ ಮಂಜೂರು ಮಾಡಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಅನುದಾನ ಮಂಜೂರು ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಂಸದ ಕ್ಯಾ.ಚೌಟ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net