

ಉಡುಪಿ: ಕರೊನಾ ನಿಯಂತ್ರಣ ಕುರಿತು ಉಡುಪಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಂದ ಕಳೆದ 2 ವಾರಗಳಿಂದ ಯಾವುದೇ ಹೊಸ ಪ್ರಕರಣಗಳು ಕಂಡುಬಂದಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.
ಕೇಂದ್ರದ ಆರೋಗ್ಯ ಸಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಉಲ್ಲೇಖವಿದೆ. ಜಿಲ್ಲೆಯಲ್ಲಿ ಮಾರ್ಚ್ 29ರಂದು ಕರೊನಾ ಕೊನೆಯ ಪ್ರಕರಣ ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಂಡ ಸಮರ್ಥ ನಿರ್ಧಾರಗಳಿಂದ ಸೋಂಕು ಹರಡಿಲ್ಲ. ಸೋಂಕಿತರು ಕಂಡುಬಂದ ಕೂಡಲೇ ಅವರೊಂದಿಗೆ ಸಂಪರ್ಕದಲ್ಲಿದ್ದವರನ್ನು ಗುರುತಿಸಿ ಕ್ವಾರಂಟೈನ್‌ಗೆ ಒಳಪಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವೈರಸ್ ಹರಡುವುದನ್ನು ತಡೆಯುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದು, ಸರಕು ಸಾಗಾಟ ಮತ್ತು ತುರ್ತು ವೈದ್ಯಕೀಯ ಕಾರಣ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಕ್ಕೆ ಜಿಲ್ಲೆಯೊಳಗೆ ಪ್ರವೇಶ ನಿರ್ಬಂಧಿಸಿರುವುದರಿಂದ ಹೊರ ಜಿಲ್ಲೆಗಳಿಂದ ಸಹ ಸೋಂಕು ಹರಡುವುದನ್ನು ತಪ್ಪಿಸಲಾಗಿದೆ. ಜಿಲ್ಲೆಯೊಳಗೆ ದಿನನಿತ್ಯದ ವಸ್ತುಗಳ ಖರೀದಿಗೆ ಸಾರ್ವಜನಿಕರಿಗೆ ಸಮಯ ನಿಗದಿಪಡಿಸಲಾಗಿದ್ದು, ಖರೀದಿ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಅನಗತ್ಯ ವಾಹನ ಸಂಚಾರವನ್ನೂ ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರಿಗೆ, ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದು, ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.