

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವುಗೊಳಿಸದಂತೆ ಮಾಡಲು
ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ತಮಗೆ ಪತ್ರ ಬರೆದಿದ್ದು ಸುಪ್ರೀಂ ಕೋರ್ಟ್‌ಗೆ ಸೂಕ್ತ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಹುಲಿಗಳ ದೀರ್ಘಕಾಲೀನ ಸಂರಕ್ಷಣೆ ಮತ್ತು ಅವುಗಳ ಆವಾಸಸ್ಥಾನದ ಸುರಕ್ಷತೆಯ ಉದ್ದೇಶಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಸರು ತಿಳಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಕೈ ಬಿಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ. ಇದರಿಂದಾಗಿ ವನ್ಯ ಜೀವಿ - ಮಾನವ ಸಂಘರ್ಷಗಳು ಮತ್ತಷ್ಟು ಹೆಚ್ಚಾಗುತ್ತದೆ. ಪರಿಸರಕ್ಕೆ ತೀವ್ರ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಅರಣ್ಯ, ಪರಿಸರ ಮತ್ತು ಹವಾಮಾನ ಇಲಾಖೆಯು ಮಧ್ಯ ಪ್ರವೇಶಿಸಿ ಯಾವುದೇ ಕಾರಣಕ್ಕೂ ಈ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬಾರದು ಎಂದು ಲೋಕಸಭಾ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೆ ಎಂದು ತಿಳಿಸಿದ್ದಾರೆ.