

ಬೆಳಗಾವಿ: ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ 16 ಪ್ಯಾರಾಮೀಟರ್ ನಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಲಾಗುತ್ತಿದ್ದು, ಇದರ ಜೊತೆಗೆ ಹೊಸದಾಗಿ ಮೈಕ್ರೋ ಬಯಾಲಜಿ ಪ್ರಯೋಗಾಲಯ ಪ್ರಾರಂಭಿಸಿ, ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ನಗರದ ಕೃಷ್ಣದೇವರಾಯ ವೃತ್ತದ ಸಮೀಪದಲ್ಲಿನ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಮಂಗಳವಾರ ಹೊಸದಾಗಿ ನಿರ್ಮಿಸಿದ ಮೈಕ್ರೋ ಬಯಾಲಜಿ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ನಿಟ್ಟಿನಲ್ಲಿ ಪ್ರಯೋಗಾಲಯದ ಸದ್ಬಳಕೆ ಮಾಡಿಕೊಂಡು ನೀರಿನ ಗುಣಮಟ್ಟ ಪರೀಕ್ಷೆ ಮಾಡಬೇಕು. ಇದರಿಂದ ಗ್ರಾಮೀಣ ಜನರಿಗೆ ಶುದ್ಧ ನೀರಿನ ಬಗ್ಗೆ ಖಚಿತ ಮಾಹಿತಿ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಶಶಿಕಾಂತ್ ನಾಯಕ, ಬೆಳಗಾವಿ ಪಂ.ರಾಇಂ ವಿಭಾಗದ ಕಾರ್ಯಪಾಲಕ ಅಭಿಯಂತರರು ಸುಂದರ್ ಕೋಳಿ ಪ್ರೆಡ್ . ಚಿಕ್ಕೋಡಿ ಪಂ.ರಾಇಂ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರವೀಣ್ ಪಟಪತಿ ಹಾಗೂ ಪ್ರಯೋಗಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.