ಚುನಾವಣೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಳ್ಳಿ

ceo meeting
ceo meeting
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಲೋಕಸಭಾ ಚುನಾವಣೆ ಕರ್ತವ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಸಿ ಅಧ್ಯಕ್ಷೆ ಡಾ.ಕೆ.ಎನ್. ಅನುರಾಧಾ ಸೂಚಿಸಿದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಟಿ ಹಾಗೂ ಎ್ಎಸ್‌ಟಿವಿ ಮತ್ತು ಸೆಕ್ಟರ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವತ್ತ ಗಮನ ನೀಡಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಅಧಿಕಾರಿಗಳ ತಂಡ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸಬೇಕು. ಜನರು ಸ್ವಯಂ ಪ್ರೇರಿತವಾಗಿ ಬಂದು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳಿಗೆ ಕಡ್ಡಾಯ ಅನುಮತಿ ಪಡೆಯಬೇಕು ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು ಹಾಗೂ ಕಾರ್ಯಕ್ರಮ ಆಯೋಜನೆಗಳ ಖರ್ಚು-ವೆಚ್ಚಗಳನ್ನು ಪರಿಶೀಲಿಸಿ ಅಂಥ ಕಾರ್ಯಕ್ರಮಗಳ ಮೇಲೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಚೆಕ್‌ಪೋಸ್ಟ್‌ಗಳಲ್ಲಿ ನಿಗಾ ವಹಿಸಿ: ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆಸಬೇಕು, ತಪಾಸಣೆ ವೇಳೆ ಯಾವುದೇ ಪ್ರಭಾವಕ್ಕೆ ಒಳಗಾಗಬಾರದು ಅಕ್ರಮ ಮದ್ಯ, ಹಣ ಮತ್ತಿತರ ವಸ್ತುಗಳು ಕಂಡುಬಂದರೆ ಕೂಡಲೇ ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಇಒ ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net