

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಹುಂಡಿ, ದೇಪಾಪುರ, ಕೆಕೆ ಹುಂಡಿ ಮತ್ತು ಚೌಡಳ್ಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಮಂಗಳವಾರ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿ ಪರಿಶೀಲಿಸಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದರು.
ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 364 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 344 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 143 ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಪೈಕಿ 5 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಲಾಯಿತು.
ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮತ್ತು ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಅಳವಡಿಕೆ ಮತ್ತು 24*7 ನೀರು ಸರಬರಾಜು ಗ್ರಾಮ ಘೋಷಣೆ ಕುರಿತು ವರದಿಗಳನ್ನು ಸಿಇಒ ಅವರು ಪರಿಶೀಲಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಅಲ್ಲದೇ ಚೌಡಳ್ಳಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕೊಡಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಪುರ ಗ್ರಾಮದಲ್ಲಿ ನಡೆಯುತ್ತಿದ್ದ ನರೇಗಾ ಕಾಮಗಾರಿಯನ್ನು ಪರಿಶೀಲಿಸಿದರು. ತೆರಕಣಾಂಬಿಯಲ್ಲಿರುವ ಗುಂಡ್ಲುಪೇಟೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬೂಸ್ಟರ್ ಪಂಪ್ ಹೌಸ್ ಅನ್ನು ಪರಿಶೀಲನೆ ಮಾಡಿದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಇಂಜಿನಿಯರ್ ಎಸ್. ಜಗದೀಶ್, ಸಹಾಯಕ ಎಂಜಿನಿಯರ್ ಸಹನಾ, ಪೂರ್ಣಿಮಾ, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಸಿ.ಎಂ. ಆಶಾ, ಸಹಾಯಕ ಇಂಜಿನಿಯರ್ ಶಿವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಜರಿದ್ದರು.