

ರಾಯಚೂರು: ಸಿರಿಧಾನ್ಯ ಉತ್ಸವ ನಿಮಿತ್ತ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಿರಿಧಾನ್ಯ ಜಾಗೃತಿ ನಡಿಗೆಗೆ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ಎನ್.ಎಸ್.ಬೋಸರಾಜು ಮಾತನಾಡಿ, ಜನವರಿಯಲ್ಲಿ ನಡೆಯಲಿರುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ಮೇಳದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮೇಳಗಳನ್ನು ಆಯೋಜಿಸಲಾಗಿದೆ. ಸಿರಿಧಾನ್ಯಗಳ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಜತೆಗೆ ರೈತರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗುತ್ತಿದೆ ಎಂದರು.
ಜಿಲ್ಲಾಕಾರಿ ಕಚೇರಿಯಿಂದ ಆರಂಭವಾದ ಜಾಗೃತಿ ನಡಿಗೆ ಬಸವೇಶ್ವರ ವೃತ್ತದಿಂದ ಕೃಷಿ ವಿಜ್ಞಾನಗಳ ವಿವಿವರೆಗೆ ಜರುಗಿತು. ಈ ಸಂದರ್ಭದಲ್ಲಿ ಡೊಳ್ಳು ಕುಣಿತ, ಎತ್ತಿನ ಬಂಡಿಗಳ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಕೃಷಿ ವಿಜ್ಞಾನಗಳ ವಿವಿ ಕುಲಪತಿ ಡಾ.ಹನುಮಂತಪ್ಪ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.