

ಚಿಕ್ಕಬಳ್ಳಾಪುರ: ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯು ಏ.18 ಮತ್ತು ಏ.19 ರಂದು ನಡೆಯಲಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಯ 7,211 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಈಗಾಗಲೇ ಸುಗಮ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು ಈ ಬಾರಿ ಸಿಇಟಿ ಪರೀಕ್ಷೆ ಬರೆಯಲು ಸುಗಮ ಪರೀಕ್ಷೆಗೆ 16 ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಕೇಂದ್ರಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು, ಆಸನ, ವಿದ್ಯುತ್, ಶೌಚಗೃಹ ವ್ಯವಸ್ಥೆ ಇದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಎಲ್ಲ ಕಡೆ ಒಬ್ಬರು ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲಾಗಿದೆ. ಪರೀಕ್ಷಾ ಸಮಯಕ್ಕೆ ಪೂರಕವಾಗಿ ಅನುಕೂಲವಾಗಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕೈಗೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸುಗಮ ಸಿಇಟಿ ಪರೀಕ್ಷೆಯ ವಿಚಾರವಾಗಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ಮಾದರಿಯಲ್ಲಿ ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪರೀಕ್ಷೆಯನ್ನು ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ನಡೆಸಲು ಸೂಚಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯ ಅಭಿರಕ್ಷೆಯಲ್ಲಿಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಮಾರ್ಗಾಧಿಕಾರಿಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ನಿಯಮಿತವಾಗಿ ತಲುಪಿಸಲಾಗುತ್ತದೆ.