

ಮಂಡ್ಯ: ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ. ಅಧ್ಯಯನಕ್ಕೆ ಸಿಇಟಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಪಿಎಚ್.ಡಿ ಅಧ್ಯಯನ ಪ್ರವೇಶಕ್ಕೆ ಅಭ್ಯರ್ಥಿಗಳ ಆಯ್ಕೆಗೆ ಏಕರೂಪತೆ ತರುವಲ್ಲಿ ಕ್ರಮ ಕೈಗೊಳ್ಳಬೇಕಾದ ವಿಧಿವಿಧಾನ ಬಗ್ಗೆ ವಿಸ್ತೃತ ವರದಿ ಪಡೆಯುವ ಸಂಬಂಧ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಸುಭಾಷ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಜ್ಞರ ಸಮಿತಿಯು ಸಲ್ಲಿಸುವ ವರದಿಯಲ್ಲಿನ ಶಿಫಾರಸುಗಳ ಆಧಾರದ ಮೇಲೆ ಪರಿಶೀಲಿಸಿ ಸರ್ಕಾರದ ಮೀಸಲಾತಿ ನಿಯಮದನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಪಿಎಚ್.ಡಿ ಪ್ರವೇಶಕ್ಕೆ ಪ್ರತಿ ವಿಶ್ವವಿದ್ಯಾಲಯದಲ್ಲೂ ಆಯಾ ವಿಭಾಗಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ವಿವಿಗಳು ಪ್ರತ್ಯೇಕವಾಗಿ ಪರೀಕ್ಷೆ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ ಎಂದಿದ್ದಾರೆ.