

ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏ.16 ಮತ್ತು 17ರಂದು ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡು ದಿನ ನಡೆಯಲಿರುವ ಪರೀಕ್ಷೆ ಬರೆಯಲು 6,401 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಿದ್ದು, ಮಂಡ್ಯ ತಾಲೂಕಿನಲ್ಲಿ 12 ಹಾಗೂ ಕೆ.ಆರ್.ಪೇಟೆ ತಾಲೂಕಿನಲ್ಲಿ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೇಂದ್ರಕ್ಕೆ ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯಲು ತಹಸೀಲ್ದಾರ್, ಬಿಇಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ಪರೀಕ್ಷೆ ನಡೆಯುವ ದಿನದಂದು ಕೇಂದ್ರದ ಸುತ್ತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುವುದು. ಖಾಸಗಿ ವ್ಯಕ್ತಿಗಳು 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವಂತಿಲ್ಲ. ಸುತ್ತಮುತ್ತಲು ಯಾವುದೇ ಜೆರಾಕ್ಸ್ ಅಂಗಡಿ ತೆರೆಯುವಂತಿಲ್ಲ ಎಂದು ಸೂಚನೆ ಹೊರಡಿಸಲಾಗುವುದು. ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಕುಡಿಯುವ ನೀರು, ಸೂಕ್ತ ಆಸನ, ಕೊಠಡಿಯಲ್ಲಿ ಗಡಿಯಾರ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು. ಪರೀಕ್ಷಾ ಕೊಠಡಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು ಎಂದು ಸೂಚನೆ ನೀಡಿದರು.
ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಎಲ್ಲ ಕೇಂದ್ರಕ್ಕೂ ಆರೋಗ್ಯ ಸಿಬ್ಬಂದಿ ಹಾಗೂ ಎರಡು ದಿನ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಪ್ರತಿ ಕೇಂದ್ರಕ್ಕೂ ಇಬ್ಬರು ಲೈನ್‌ಮನ್ ನಿಯೋಜಿಸಬೇಕು. ಕೇಂದ್ರಗಳಲ್ಲಿ ಯಾವುದೇ ಲೋಪಗಳಾಗದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ನಡೆಯುವ 15 ಕೇಂದ್ರದಲ್ಲೂ ಸಿ.ಸಿ ಕ್ಯಾಮೆರಾ ಕಡ್ಡಾಯ. ಎಲ್ಲ ಕೊಠಡಿಯ ವಿಡಿಯೋಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರದರ್ಶನಗೊಳ್ಳುತ್ತಿರುತ್ತವೆ. ಆದ್ದರಿಂದ ಕೊಠಡಿ ಮೇಲ್ವಿಚಾರಕರು ಜಾಗೃತೆಯಿಂದ ಕಾರ್ಯನಿರ್ವಹಿಸಿ ಎಂದು ಎಚ್ಚರಿಕೆ ನೀಡಿದರು.
ಪರೀಕ್ಷಾರ್ಥಿಗಳು ರಿಸ್ಟ್‌ವಾಚ್, ಕ್ಯಾಲ್ಕುಲೇಟರ್, ಮೊಬೈಲ್ ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನವನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ. ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳನ್ನು ಕಳುಹಿಸುವ ಮೊದಲು ಅವರ ಪ್ರವೇಶ ಪತ್ರವನ್ನು ಸ್ಕಾೃನ್ ಮಾಡಿ ವಿದ್ಯಾರ್ಥಿಗಳ ಗುರುತು ಖಾತರಿಯಾದ ನಂತರ ಪ್ರವೇಶ ನೀಡಬೇಕು. ಪರೀಕ್ಷೆಗೆ ನಿಯೋಜಿಸಲಾಗಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಒಎಂಆರ್ ಪತ್ರಿಕೆಯನ್ನು ತುಂಬುವ ವಿಧಾನವನ್ನು ವಿವರವಾಗಿ ತಿಳಿಸಬೇಕು. ಒಎಂಆರ್‌ನಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಮಾಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಂಗವಿಕಲ ಮಕ್ಕಳಿಗೆ ಕೆಳಮಹಡಿಯಲ್ಲೇ ಕೊಠಡಿಗಳನ್ನು ಒದಗಿಸಬೇಕು. ಪರೀಕ್ಷೆ ಮುಗಿದ ನಂತರ ಯಾವುದೇ ವಿಳಂಬ ಮಾಡದೆ, ಎಲ್ಲ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಖಜಾನೆಗೆ ಮಾರ್ಗಾಧಿಕಾರಿಗಳು ತಲುಪಿಸಬೇಕು ಎಂದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚೆಲುವಯ್ಯ, ಮಂಡ್ಯ ಪಶ್ಚಿಮ ಠಾಣೆ ಆರಕ್ಷಕ ಉಪನಿರೀಕ್ಷಕ ಕೆ.ಎನ್.ಕೇಶವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1(ಆಡಳಿತ) ಎಂ.ಬಾಬು, ಜಿಲ್ಲಾ ಖಜಾನೆಯ ಮುಖ್ಯಲೆಕ್ಕಿಗ ಬಿ.ಜೆ.ಬಸವಣ್ಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಇತರರಿದ್ದರು.