ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕೆ

Chalavadi Narayanaswamy press conference Mandya
Published on

ಮಂಡ್ಯ: ಕೆ.ಆರ್.ಪೇಟೆ ತಾಲೂಕು ಕತ್ತರಘಟ್ಟ ಗ್ರಾಮದಲ್ಲಿ ನಡೆದ ಜಯಕುಮಾರ್ ಸಾವಿನ ಪ್ರಕರಣವು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ನೊಂದಿರುವ ದಲಿತ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಜಯಕುಮಾರ್ ಪತ್ನಿ ಲಕ್ಷ್ಮೀ ದೂರು ಕೊಡಲು ಹೋದಾಗ, ಆ ಅರ್ಜಿಯನ್ನು ಪೊಲೀಸರು ಹರಿದು ಬಿಸಾಕಿ, ಆತ್ಮಹತ್ಯೆ ಎಂದು ಅವರೇ ದೂರು ಬರೆದುಕೊಂಡಿದ್ದಾರೆ. ಆತ್ಮಹತ್ಯೆಯಾಗಿದ್ದರೆ ಆರೋಪಿ ಅನಿಲ್‌ಕುಮಾರ್ ಅವರನ್ನು ಬಂಧಿಸಿದ್ದು ಏಕೆ?. ಹುಲ್ಲಿನ ಮೆದೆಗೆ ಬಿದ್ದು ಯಾರೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಇದು ಪೂರ್ವ ನಿಯೋಜಿತ ಕೊಲೆ ಎಂದು ಪ್ರತಿಪಾದಿಸಿದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಲಿತರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲರಾಗಿರುವ ಹಾಗೂ ಪ್ರಕರಣವನ್ನು ತಿರುಚಲು ಯತ್ನಿಸಿರುವ ನಾಲ್ವರು ಪೊಲೀಸರನ್ನು ಅಮಾನತು ಮಾಡಿದರೆ ಸಾಲದು, ಕೆಲಸದಿಂದ ವಜಾ ಮಾಡಬೇಕು. ರಾಜ್ಯ ಸರ್ಕಾರದಲ್ಲಿ ದಲಿತರಿಗೆ ರಕ್ಷಣೆಯಿಲ್ಲ. ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ. ಜಯಕುಮಾರ್ ಸಾವಿಗೆ ನ್ಯಾಯ ಸಿಗಬೇಕು. ಸಾಯಿಸಿದವರಿಗೆ ಶಿಕ್ಷೆಯಾಗಬೇಕು. ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ಮತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಲಬುರಗಿ ಜಿಲ್ಲಾಧಿಕಾರಿಯನ್ನು ನಿಂದಿಸಿರುವ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ವಿರುದ್ಧ ದುರುದ್ದೇಶದಿಂದ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ರವಿಕುಮಾರ್ ಇಬ್ಬರೂ ಪರಿಶಿಷ್ಟ ಜಾತಿಗೆ ಸೇರಿದವರಲ್ಲ. ಆದರೂ, ರವಿಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತರಬೇಕಾಯಿತು ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net