

ಬಸವಕಲ್ಯಾಣ: ನಗರ ಪೊಲೀಸ್ ಠಾಣೆಯ ವ್ಯಾಪ್ತಿಯೊಂದರ ಗ್ರಾಮದಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಯುವತಿಯ ನಿವಾಸಕ್ಕೆ ಭಾನುವಾರ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.
ಯುವತಿಯ ಪಾಲಕರ ಜತೆಗೆ ಕೆಲ ಕಾಲ ಘಟನೆಯ ಕುರಿತು ಚರ್ಚಿಸಿ, ಕುಟುಂಬದ ಸದಸ್ಯರಿಗೆ ಧೈರ್ಯ ಹೇಳಿದರು. ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳು ಕಲ್ಪಿಸಿಕೊಡಲು ಬೇಕಾದ ಕ್ರಮ ಕೈಗೊಳ್ಳಲಾಗುವುದು ಹಾಗೂ ಮೃತ ಯುವತಿಯ ಇಬ್ಬರು ಸಹೋದರರಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಉದ್ದೇಶದಿಂದಾಗಿ ಸರ್ಕಾದ ವಸತಿ ನಿಲಯಗಳಲ್ಲಿ ಪ್ರವೇಶ ಕಲ್ಪಿಸಿ ಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ಕುಟುಂಬ ಬಡವರಾದ ಹಿನ್ನಲೆಯಲ್ಲಿ ಸರ್ಕಾರದಿಂದ ಮನೆ ಮಂಜೂರು ಮಾಡಿ ಕೊಡಲು ಮುಂದಾಗಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ನಿತ್ಯ ಬಸ್ ಸಂಚರಿಸಲು ಅಧಿಕಾರಿಗಳ ಜತೆಗೆ ಚರ್ಚಿಸಿ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿದ್ದ ಶಾಸಕ ಶರಣು ಸಲಗರ ಅವರಿಗೆ ಸಲಹೆ ನೀಡಿದರು.
ಗುಣತೀರ್ಥವಾಡಿಯ ಕಲ್ಯಾಣ ಮಹಾಮನೆಯ ಶ್ರೀ ಬಸವಪ್ರಭು ಸ್ವಾಮೀಜಿ, ಶಾಸಕರಾದ ಶರಣು ಸಲಗರ, ಡಾ.ಸಿದ್ದಲಿಂಗಪ್ಪ ಪಾಟೀಲಗಗ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ತಹಸೀಲ್ದಾರ್ ದತ್ತಾತ್ರೇಯ ಗಾದಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಪಕುಮಾರ ಉತ್ತಮ ಇತರರಿದ್ದರು.