

ಮೈಸೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಕೂಡಲೇ ಕ್ಷಮೆಯಾಚಿಸದೆ ಇದ್ದರೆ ಅವರು ಹೋದ ಕಡೆಗಳಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ ಎಚ್ಚರಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಲವಾರು ಕೊಡುಗೆ ಗಳನ್ನು ನೀಡಿದ್ದಾರೆ. ಅವರು ನೀಡಿದ ಕೊಡುಗೆಗಳನ್ನು ಈಗಿನ ಬಿಜೆಪಿ ಸರ್ಕಾರ ಒಂದೊಂದಾಗಿ ಕಸಿಯುತ್ತಿದೆ. ಆದರೆ, ಈ ವಿಚಾರದಲ್ಲಿ ಧ್ವನಿ ಎತ್ತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸಲು ಆಸಕ್ತಿ ತೋರದ ನಾರಾಯಣ ಸ್ವಾಮಿ ದಲಿತರಿಗೆ ದ್ರೋಹ ಬಗೆಯುವ ಕಾರ್ಯ ಮಾಡುತ್ತಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಹಿಂದುತ್ವವಾದಿಗಳು ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ತಮ್ಮೆಡೆಗೆ ದಲಿತ ನಾಯಕರುಗಳನ್ನು ಸೆಳೆಯುತ್ತಿದ್ದಾರೆ. ದಲಿತರಿಗೆ ಸೂಕ್ತ ಸ್ಥಾನಮಾನ ನೀಡದೆ ಅವರನ್ನು ಮತ್ತೆ ಗುಲಾಮಗಿರಿಗೆ ತಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಅದಕ್ಕೆ ಚಲವಾದಿ ನಾರಾಯಣ ಸ್ವಾಮಿ ತಲೆಯ ಮೇಲೆ ಹಳೆಯ ಚಡ್ಡಿ ಹೊತ್ತಿದ್ದೇ ಸಾಕ್ಷಿ ಎಂದು ಟೀಕಿಸಿದರು.