ಜಿಲ್ಲೆಗೆ ಡಿ.12ರಂದು ಮುಖ್ಯಮಂತ್ರಿಗಳ ಭೇಟಿ

03raju3
Published on

ಚಾಮರಾಜನಗರ: ಜಿಲ್ಲೆಗೆ ಇದೇ ಡಿ. 12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಿಲ್ಲದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಪೂರ್ವ ಸಿದ್ದತೆಗಳ ಪರಿಶೀಲನೆಗಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಂತ್ರಿಯವರು ಡಿ.12 ರಂದು ಮೊದಲಿಗೆ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಬಳಿಕ ಹನೂರಿನಲ್ಲಿಯೂ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ತದನಂತರ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಸುವರು. ಈ ಎಲ್ಲಾ ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ಪೂರ್ವ ಸಿದ್ದತೆ ಕೈಗೊಳ್ಳಬೇಕೆಂದು ತಿಳಿಸಿದರು.


ಜಿಲ್ಲೆ ಸರ್ವಾಂಗೀಣ ಅಭಿವೃಧ್ದಿಯಾಗಬೇಕಿದೆ. ಇನ್ನಷ್ಟು ಕಾರ್ಖಾನೆಗಳು, ಉದ್ಯಮಗಳು ಬೆಳೆಯಬೇಕಿದೆ. ಪ್ರಗತಿಗೆ ಉತ್ತೇಜನ ನೀಡಬೇಕಾಗುತ್ತೆದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮುಖೇನ ಶಕ್ತಿ ತುಂಬಬೇಕಿದೆ. ಅಭಿವೃದ್ದಿಗೆ ಪೂರಕವಾಗಿ ಹಲವು ಪ್ರಕ್ರಿಯೆಗಳು ನಡೆಯಬೇಕಿದೆ. ಮುಖ್ಯಂತ್ರಿಗಳ ಭೇಟಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಅಧಿಕಾರಿಗಳು ಸಕಲ ಸಿದ್ದತೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ತಿಳಿಸಿದರು.


ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಹಾಗೂ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ದೀಪ ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಸಂತೋಷ್ ಕುಮಾರ್, ಕೆಶಿಪ್ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net