

ಚಾಮರಾಜನಗರ: ಪ್ರತಿಯೊಬ್ಬರಿಗೂ ಸಂವಿಧಾನ ಹಾಗೂ ಮೂಲಭೂತ ಕರ್ತವ್ಯಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ತಿಳಿಸಿದರು.
ತಾಲೂಕಿನ ಸಂತೇಮರಹಳ್ಳಿ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಅಭಿಯಾನ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಹಳಷ್ಟು ಜನರಿಗೆ ಕಾನೂನಿನ ಜ್ಞಾನ ಇಲ್ಲದಿರುವುದರಿಂದ ದೌರ್ಜನ್ಯ ಹಾಗೂ ಅಪರಾಧಗಳು ಜರುಗುತ್ತಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಅಭಿಯಾನದ ಮೂಲಕ ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಕಾನೂನು ಅರಿವು ಮೂಡಿಸಲಾ ಗುತ್ತಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಕೇಳುವ ನಾವು ಹಾಗೆಯೇ ಮೂಲಭೂತ ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನದಡಿಯಲ್ಲಿ ಹಲವು ಕಾನೂನುಗಳಿದ್ದು ಅವುಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ತಿಳಿದುಕೊಂಡರೇ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಬಹುದು ಎಂದು ತಿಳಿಸಿದರು.
ಸಾಧನ ಸಂಸ್ಥೆ ನಿರ್ದೇಶಕ ಟಿ.ಜೆ. ಸುರೇಶ್ ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಹಲವು ಕಾಯ್ದೆಗಳು ಜಾರಿಯಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆಗಾಗಿಯೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ ಮತ್ತು ಮಕ್ಕಳ ಸಹಾಯ ವಾಣಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳು ದೇಶದ ಆಸ್ತಿ. ಮಕ್ಕಳಿಗೆ ಜೀವಿಸಲು ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು ಎಂದು ಹೇಳಿದರು.
ಹಿರಿಯ ವಕೀಲ ಎ.ರಮೇಶ್, ಸಬ್‌ಇನ್ಸ್‌ಪೆಕ್ಟರ್ ಆರ್.ವೆಂಕಟೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಮಂಜು ಹರವೆ, ಶಾಲೆಯ ಮುಖ್ಯ ಶಿಕ್ಷಕ ಸುರೇಶ್, ಸಹ ಶಿಕ್ಷಕ ವಿಶ್ವನಾಥ್ ಇತರರಿದ್ದರು.