

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಥಮ ದರ್ಜೆ ಕಾಲೇಜನ್ನು ಸ್ಥಳಾಂತರಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಅಶ್ವತ್ಥನಾರಾಯಣ್ ಭರವಸೆ ನೀಡಿದ್ದಾರೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಬುಧವಾರ ಸಚಿವರನ್ನು ತಾವು ಭೇಟಿ ಮಾಡಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅದರಲ್ಲಿಯೂ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕುವುದರಿಂದ ಗ್ರಾಮದಲ್ಲಿ ಕಾಲೇಜನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಮಾಡಿದ ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ. ಕಾಲೇಜನ್ನು ಸ್ಥಳಾಂತರಿಸುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದು ವಿಜಯವಾಣಿಗೆ ತಿಳಿಸಿದರು. ಮಾಜಿ ಸಂಸದ ಆರ್.ಧ್ರುವನಾರಾಯಣ ಈ ಸಂದರ್ಭ ಹಾಜರಿದ್ದರು ಎಂದು ಅವರು ತಿಳಿಸಿದರು.