ಶಾಲಾ-ಕಾಲೇಜು ಆರಂಭಿಸುವುದನ್ನು ಮುಂದೂಡಿ

5MAHESH1
Published on

ಕರ್ನಾಟಕ ಸೇನಾ ಪಡೆಯಿಂದ ಸರ್ಕಾರಕ್ಕೆ ಮನವಿ

ಚಾಮರಾಜನಗರ: ಸರ್ಕಾರ ಜುಲೈ ತಿಂಗಳಿನಿಂದ ಶಾಲಾ, ಕಾಲೇಜು ಪ್ರಾರಂಭಿಸುತ್ತಿರುವುದನ್ನು ಮುಂದೂಡಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಹೆಚ್ಚುವರಿ ಜಿಲ್ಲಾದಿಕಾರಿ ಸಿ.ಎಲ್. ಆನಂದ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಇಡೀ ಪ್ರಪಂಚವೇ ಕರೊನಾದಿಂದ ತತ್ತರಿಸಿ ಹೋಗಿದೆ. ಜನರು ಭಯಭೀತರಾಗಿದ್ದಾರೆ. ಕರ್ನಾಟಕದಲ್ಲೂ ಸಹ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ರಾಜ್ಯ ಸರ್ಕಾರ ಜುಲೈ ತಿಂಗಳಿನಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಲು ಹೊರಟಿರುವುದು ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಹೊರಟಿರುವುದು ಖಂಡನೀಯ ಎಂದರು.
ಶಾಲಾ-ಕಾಲೇಜು ಪ್ರಾರಂಭಿಸುವ ವಿಚಾರದಲ್ಲಿ ರಾಜ್ಯದೆಲ್ಲೆಡೆ ಪಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ತಜ್ಞರು ಮತ್ತು ಇನ್ನಿತರರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರ ಒಂದು ಕಡೆ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಬಾರದೆಂದು ನಿರ್ದೇಶನ ನೀಡುತ್ತದೆ. ಇನ್ನೊಂದು ಕಡೆ ಶಾಲೆ ಪ್ರಾರಂಭಿಸಲು ಅನುಮತಿ ನೀಡಿರುವುದು ಎಷ್ಟು ಸರಿ ? ಎಂದ ಅವರು, ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಹರಡಿದರೆ ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಚಾ.ವೆಂ.ರಾಜ್‌ಗೋಪಾಲ್, ಗು.ಪುರುಷೋತ್ತಮ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net