ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ

 ಹನೂರಿನಲ್ಲಿ ರೈತರು ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಿದರು. ಮೋನಾರೋತ್, ಕೆ.ಎನ್ ಚೈತ್ರಾ, ಅಮ್ಜಾದ್‌ಖಾನ್, ಪ್ರಸಾದ್ ಇತರರು ಇದ್ದರು.
ಹನೂರಿನಲ್ಲಿ ರೈತರು ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಿದರು. ಮೋನಾರೋತ್, ಕೆ.ಎನ್ ಚೈತ್ರಾ, ಅಮ್ಜಾದ್‌ಖಾನ್, ಪ್ರಸಾದ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಶ್ರೀರೂಪಾ
  • ರೈತರ ಸಮಸ್ಯೆಗಳ ನಿವಾರಣೆ ಸಂಬಂಧ ಅಧಿಕಾರಿಗಳ ಸಭೆ
  • ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣ
ಹನೂರು: ಜಲಾಶಯಗಳಿಗೆ ನೀರು ತುಂಬಿಸುವುದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು, ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವುದು ಹಾಗೂ ರೈತರ ಸಮಸ್ಯೆಗಳ ನಿವಾರಣೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಸೋಮವಾರ ವಿವಿಧ ರೈತ ಸಂಘಟನೆ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿ, ಹನೂರು ತಾಲೂಕಿನಲ್ಲಿ ಬೇಸಿಗೆ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತದೆ. ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗುವುದು ಎಂದರು.
ಏತನೀರಾವರಿ ಯೋಜನೆ ರೂಪಿಸುವಂತೆ ರೈತರು ಕಳೆದ 85 ದಿನಗಳಿಂದ ವಡಕೆಹಳ್ಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂಬಂಧ ಅಗತ್ಯ ಮಾಹಿತಿ ಪಡೆದು ಕ್ರಮವಹಿಸಲಾಗುವುದು. ತಾಲೂಕಿನಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ರೈತರೊಬ್ಬರು ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಇದರಿಂದ ತುರ್ತು ಚಿಕಿತ್ಸೆ ಪಡೆಯಬೇಕಾದರೆ ಖಾಸಗಿ ಆಸ್ಪತ್ರೆಯ ಮೊರೆ ಹೋಗಬೇಕಿದ್ದು, ಜನರು ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರೆ, ರೈತ ವಿನೇಶ್ ಅವರು ಆರ್.ಎಸ್ ದೊಡ್ಡಿಯ ಕೋಳಿ ಸಾಕಣೆ ಘಟಕದಲ್ಲಿ ಸಮರ್ಪಣೆ ನಿರ್ವಹಣೆ ಇಲ್ಲದರ ಪರಿಣಾಮ ಅನೈರ್ಮಲ್ಯ ಮನೆ ಮಾಡಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ಫೋನ್ ಮೂಲಕ ಸಂಪರ್ಕಿಸಿ ಹನೂರು ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಅಮ್ಜಾದ್‌ಖಾನ್ ಮಾತನಾಡಿ, ಗೋಪಿನಾಥಂ ಗ್ರಾಪಂ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಕರ್ಯವಿಲ್ಲದೆ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಈ ಸಂಬಂಧ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ 2 ಸಾವಿರ ಜನರೊಂದಿಗೆ ಪಾದಯಾತ್ರೆಯ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ಈ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮವಹಿಸುವುದಾಗಿ ಡಿಸಿ ಭರವಸೆ ನೀಡಿದರು.
ಜಿಪಂ ಸಿಇಒ ಮೋನಾರೋತ್, ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ಬಿಇಒ ಮಹೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net