ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ

ಜಿಲ್ಲಾಧಿಕಾರಿ  ಶ್ರೀರೂಪಾ
ಜಿಲ್ಲಾಧಿಕಾರಿ ಶ್ರೀರೂಪಾ
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳು
  • ಒಟ್ಟು 6909 ಪರೀಕ್ಷಾರ್ಥಿಗಳು
ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಗಳು ೆ.28ರಿಂದ ಮಾ.17ರವರೆಗೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 6285 ಹೊಸ ವಿದ್ಯಾರ್ಥಿಗಳು, 150 ಖಾಸಗಿ ವಿದ್ಯಾರ್ಥಿಗಳು ಹಾಗೂ 474 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6909 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳು ಇರಲಿವೆ.
ಪರೀಕ್ಷಾ ದಿನಗಳಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೆಟ್) ತೋರಿಸಿ ತಮ್ಮ ಗ್ರಾಮಗಳಿಂದ ಪರೀಕ್ಷಾ ಕೇಂದ್ರಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರವಿದ್ದರೆ ಕೋರಿಕೆಯ ಮೇರೆಗೆ ಬಸ್ ನಿಲುಗಡೆ ಮಾಡಲು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಹಾಗೂ ಗೌಪ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಇಬ್ಬರು ಶುಶ್ರೂಷಕರನ್ನು ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ನೇಮಿಸಲಾಗಿದೆ.
ಪರೀಕ್ಷೆ ನಡೆಯುವ ಸಮಯದಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಓದುವ ಸಮಯದಲ್ಲಿ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಪಾವಿತ್ರತೆಯನ್ನು ಕಾಪಾಡುವ ದೃಷ್ಠಿಯಿಂದ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯು ಸಿ.ಸಿ. ಟಿವಿ. ಕಣ್ಗಾವಲಿನಲ್ಲಿ ನಡೆಯಲಿದೆ. ಜಿಲ್ಲಾ ಹಂತದಲ್ಲಿ ಇದನ್ನು ವೀಕ್ಷಿಸಲು ಪ್ರತ್ಯೇಕ ತಂಡವನ್ನು ರಚಿಸಲಾಗಿದೆ.
ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದಾದ ಸುಳ್ಳುಸುದ್ದಿ, ವದಂತಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಿವಿಗೊಡಬಾರದು. ಪರೀಕ್ಷಾ ಪಾವಿತ್ರತೆ ಕಾಪಾಡಲು ಎಲ್ಲಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ ತೆರೆದು ಇದಕ್ಕಾಗಿ ನುರಿತ ಉಪನ್ಯಾಸಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net