ಚಾಮರಾಜನಗರ: ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿತರಣೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಕ್ಸಿಜನ್ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಜ.26 ರಂದು ಜರುಗುವ ಗಣರಾಜ್ಯೋತ್ಸವದಲ್ಲಿ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಲಾಗಿತ್ತು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನೊಂದಿಗೆ ಮಾತನಾಡಿದ್ದು, ನಾನೇ ಚಾಮರಾಜನಗರಕ್ಕೆ ಭೇಟಿ ನೀಡಿ ಅವರಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ ಮುಖ್ಯಮಂತ್ರಿಗಳೇ ಚಾಮರಾಜನಗರಕ್ಕೆ ಆಗಮಿಸಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ನೀಡಲಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಸಿಇಓ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಅಪರ ಜಿಲ್ಲಾಧಿಕಾರಿ ಟಿ,ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಹಾಗೂ ಇತರರು ಹಾಜರಿದ್ದರು.